ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಸಂದರ್ಭದಲ್ಲಿ ಉಂಟಾಗುವ ನೈಸರ್ಗಿಕ ಅವಘಡ ನಿವಾರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.
ದೇವನಹಳ್ಳಿಯ ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದರು. ಮುಂಗಾರು ಮಳೆ ಆರಂಭವಾಗಿದ್ದು, ನೈಸರ್ಗಿಕ ಅವಘಡ ಸಂಭವಿಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಸ್ಥಳೀಯ ಸಂಸ್ಥೆಗಳು ಆಯಾ ವ್ಯಾಪ್ತಿಯಲ್ಲಿರುವ ಚರಂಡಿ ಮತ್ತು ನಾಲೆಗಳನ್ನು ಸ್ವಚ್ಛಗೊಳಸಬೇಕು. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ರಸ್ತೆಗಳನ್ನು ಪರಿಶೀಲಿಸಿ, ದುರಸ್ತಿಗೆ ಅಗತ್ಯ ಕಂಡುಬಂದಲ್ಲಿ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.
ತುರ್ತು ವೈದ್ಯಕೀಯ ಸೇವೆ ಒದಗಿಸಲು ಆರೋಗ್ಯ ಇಲಾಖೆ ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು. ಡೆಂಘೆ ಮತ್ತು ಚಿಕೂನ್‌ಗುನ್ಯಾದಂತಹ ಸಾಂಕ್ರಾಮಿಕ ರೋಗ ತಡೆಗಟ್ಟಲು ಔಷಧ ಸಿಂಪಡಿಸಿ ಸ್ವಚ್ಛತೆ ಕಾಪಾಡಿಕೊಳ್ಳಲು ಅರಿವು ಮೂಡಿಸಬೇಕು. ಮೇವು ಸಂಗ್ರಹಣೆ ಮತ್ತು ಕಾಲು ಬಾಯಿ ರೋಗದ ಲಸಿಕೆ ಸೇರಿ ಇತರೆ ಅಗತ್ಯಗಳ ಬಗ್ಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಜಗದೀಶ್ ಕೆ.ನಾಯಕ್ ತಿಳಿಸಿದರು.
ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ರವಾನೆ: ಅಪಾಯದಲ್ಲಿರುವ ಹಳೇ ಮರ ಹಾಗೂ ಶಿಥಿಲ ಕಟ್ಟಡಗಳನ್ನು ತೆರವುಗೊಳಿಸಬೇಕು. ಬೆಸ್ಕಾಂ ಅಧಿಕಾರಿಗಳ ಸಹಕಾರದೊಂದಿಗೆ ವಿದ್ಯುತ್ ತಂತಿ ಹಾಗೂ ಕಂಬ ಪರಿಶೀಲಿಸಿ, ಅಪಾಯಕಾರಿ ಕಂಬ ತೆರವುಗೊಳಿಸಬೇಕು ಎಂದು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ ರವಾನಿಸಲಾಯಿತು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಯಸ್ವಾಮಿ, ಜಿಲ್ಲಾ ಆರೋಗ್ಯಾಧಿಕಾರಿ ಮಂಜುಳಾದೇವಿ, ಉಪ ಪೊಲೀಸ್ ಅಧೀಕ್ಷಕ ರಂಗಪ್ಪ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಸುಮಾ, ಜಿಲ್ಲಾ ವಿಪತ್ತು ತಜ್ಞೆ ವಿನೂತಾ ಇದ್ದರು.
ಅಧಿಕಾರಿಗಳಿಂದ ಮಾಹಿತಿ: ನೈಸರ್ಗಿಕ ಅವಘಡ ಸಂಬಂಧ ತಾಲೂಕು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಈಗಾಗಲೇ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು, ಮೂರ‌್ನಾಲ್ಕು ವರ್ಷದಿಂದ ಜಿಲ್ಲೆಯಲ್ಲಿ ಸಂಭವಿಸಿದ ಅವಘಡ, ಆದಂತಹ ಹಾನಿ ಹಾಗೂ ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾಹಿತಿ ಪಡೆದರು. ತುರ್ತು ಸಂದರ್ಭದಲ್ಲಿ ಅಧಿಕಾರಿಗಳು ವಿನಾಕಾರಣ ರಜೆ ಹಾಕಬಾರದು, ಸ್ಥಳೀಯವಾಗಿ ಹಾಜರಿದ್ದು, ಖುದ್ದು ಪರಿಸ್ಥಿತಿ ಪರಿಶೀಲಿಸಿ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಡಿಸಿ ಕಟ್ಟುನಿಟ್ಟಿನ ಸೂಚನೆ ನೀಡಿದರು.