ಮೈಸೂರು: ದಸರಾ ಜಂಬೂ ಸವಾರಿ ಮೆರವಣಿಗೆಯ ಪುಷ್ಪಾರ್ಚನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ಅಂಬಾರಿ ಮೇಲೆ ಕೂರಿಸುವ ತಾಯಿ ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ನೆರವೇರಿಸಿದ ನಂತರ ಜಂಬೂಸವಾರಿ ಮೆರವಣಿಗೆಗೆ ಚಾಲನೆ ದೊರೆಯುತ್ತದೆ. ಈ ಕಾರ್ಯಕ್ರಮಕ್ಕೆ ನರೇಂದ್ರ ಮೋದಿ ಆಗಮಿಸುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್ ಸ್ಪಷ್ಟನೆ ನೀಡಿದರು.
ದಸರಾ ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ. ಆದರೆ, ಅವರು ಅರಮನೆಗೆ ಭೇಟಿ ನೀಡುವುದು ಖಚಿತವಾಗಿಲ್ಲ, ಈ ಬಗ್ಗೆ ಮಾಹಿತಿ ಕೇಳಲಾಗಿದೆ. ರಾಷ್ಟ್ರಪತಿ ಅವರಿಂದ ಅರಮನೆ ಭೇಟಿಗೆ ಇನ್ನೂ ಅಧಿಕೃತ ಒಪ್ಪಿಗೆ ದೊರೆತ್ತಿಲ್ಲ ಎಂದರು.