ಮಂಡ್ಯ: ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರಿಗೂ ಕಾಲಕ್ಕೆ ತಕ್ಕಂತೆ ಕೌಶಲ ತರಬೇತಿ ನೀಡುವುದು ಅಗತ್ಯ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ನೀಡಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಅಭಿನಂದನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು. ಮಾಧ್ಯಮ ಸೇರಿದಂತೆ ಯಾವುದೇ ಕ್ಷೇತ್ರದ ಸಂಸ್ಥೆಗಳಾಗಲಿ ತಮ್ಮ ನೌಕರರಿಗೆ ಕೌಶಲ ತರಬೇತಿಯನ್ನು ನೀಡಬೇಕು. ಇದರಿಂದ ಸಂಸ್ಥೆಯ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಕಿವಿಮಾತು ಹೇಳಿದರು.
ಅಭದ್ರತೆಯ ನಡುವೆ ಪತ್ರಕರ್ತರು ಕೆಲಸ ಮಾಡುತ್ತಿದ್ದಾರೆ. ಹಗಲು ರಾತ್ರಿಯೆನ್ನದೆ ಕೆಲಸ ಮಾಡುತ್ತಿರುವ ಮಾಧ್ಯಮದವರು ಬದುಕು ಕಟ್ಟಿಕೊಂಡಿದ್ದಾರೆನ್ನುವ ಬಗ್ಗೆ ಕೆಲವೊಮ್ಮೆ ಆಲೋಚನೆ ಬರುತ್ತದೆ. ಇನ್ನು ಸುದ್ದಿಗಳನ್ನು ಕೊಟ್ಟಾಗ ಅದು ಕೆಲವರು ಗ್ರಹಿಸಿಕೊಳ್ಳಲು ಕಷ್ಟವಾಗುತ್ತದೆ. ವಸ್ತುನಿಷ್ಠ ವರದಿಯಾದಾಗ ಇಂತಹ ವಿಚಾರ ಸಾಮಾನ್ಯ. ನ್ಯಾಯಯುತ ವರದಿ ಮಾಡುವವರು ಯಾರಿಗೂ ತಲೆಕೆಡಿಸಿಕೊಳ್ಳಬೇಕಿಲ್ಲ ಎಂದು ಸಲಹೆ ನೀಡಿದ ಅವರು, ಮುಂದಿನ ದಿನಗಳಲ್ಲಿ ಆದಿಚುಂಚನಗಿರಿ ಮಠ ಅಥವಾ ಬಿ.ಜಿ ನಗರದಲ್ಲಿ ವಿಭಾಗೀಯ ಮಟ್ಟದ ಕಾರ್ಯಾಗಾರವನ್ನು ಮಾಧ್ಯಮದವರಿಗಾಗಿ ಆಯೋಜನೆ ಮಾಡಲಾಗುವುದು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ಮಾಜಿ ಸಚಿವರಾದ ಎನ್.ಚಲುವರಾಯಸ್ವಾಮಿ, ಸಿ.ಎಸ್.ಪುಟ್ಟರಾಜು, ಪಿ.ಎಂ.ನರೇಂದ್ರಸ್ವಾಮಿ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಅಶೋಕ್ ಜಯರಾಂ, ಕಾಂಗ್ರೆಸ್ ಮುಖಂಡ ಸಿದ್ದರೂಢ ಸತೀಶ್‌ಗೌಡ, ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ, ಜಿಲ್ಲಾ ಎಸ್ಪಿ ಎನ್.ಯತೀಶ್, ಜಿಪಂ ಸಿಇಒ ಶಾಂತಾ ಎಲ್.ಹುಲ್ಮನಿ, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ, ಸಂಘದ ರಾಜ್ಯ ಕಾರ್ಯದರ್ಶಿ ಮತ್ತೀಕೆರೆ ಜಯರಾಂ, ಸೋಮಶೇಖರ್ ಕೆರಗೋಡು, ಕೆ.ಸಿ.ಮಂಜುನಾಥ, ಲಿಂಗರಾಜು ಇತರರಿದ್ದರು.
ಇದೇ ವೇಳೆ ಸಂಘದ ಕ್ಷೇಮನಿಧಿಗೆ ವಂತಿಕೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಹಾಗೂ ಪತ್ರಕರ್ತರನ್ನು ಸನ್ಮಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮಾಡಲಾಯಿತು.