ಚಿಕ್ಕಬಳ್ಳಾಪುರ: ರಾಜ್ಯ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ ದುರ್ಬಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಪ್ರಬಲ ಕಾಯ್ದೆ ಜಾರಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗೆ ಕೆಲ ಸಲಹೆಗಳನ್ನು ನೀಡಿದ್ದೇವೆ ಎಂದರು.
ನಗರದ ಪಿಪಿಎಚ್ ಶಾಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಸಂಪೂರ್ಣವಾಗಿ ಗೋಹತ್ಯೆ, ಗೋಮಾಂಸ ಮಾರಾಟ ಮತ್ತು ಸೇವನೆ ನಿಷೇಧವಾಗಬೇಕು. ಈ ನಿಟ್ಟಿನಲ್ಲಿ ಅಧಿವೇಶನದಲ್ಲಿ ಗಮನ ಸೆಳೆಯಲಾಗಿದೆ ಎಂದು ತಿಳಿಸಿದರು.
ಸವೋಚ್ಚ ನ್ಯಾಯಾಲಯದ ಆದೇಶದಂತೆ ಧಾರ್ವಿುಕ ಸಂಸ್ಥೆಗಳು ರಾತ್ರಿ 10 ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಈ ನಿಯಮದ ಪರಿಣಾಮಕಾರಿ ಅನುಷ್ಠಾನಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.
ಮಕ್ಕಳಿಗೆ ಕರೊನಾ ಲಸಿಕೆ ಹಾಕುವ ಅಗತ್ಯ ಸಿದ್ಧತೆಗಳು ಅಂತಿಮ ಹಂತದಲ್ಲಿವೆ. ಬಹುಬೇಗ ವಿಶೇಷ ಲಸಿಕೆ ಸಿಗಲಿದ್ದು, ದಸರಾ ರಜೆ ಮುಗಿದ ಬಳಿಕ ಒಂದರಿಂದ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಚಿಂತಿಸಿದೆ ಎಂದು ತಿಳಿಸಿದ ನಾರಾಯಣಸ್ವಾಮಿ, ಉತ್ತರ ಪ್ರದೇಶದಲ್ಲಿ ಹಿಂಸಾಚಾರ ಮತ್ತು ರೈತರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಮುಖ್ಯಮಂತ್ರಿ ಸೂಕ್ತ ಕ್ರಮ ಕೈಗೊಳ್ಳುವ ನಿರೀಕ್ಷೆ ವ್ಯಕ್ತಪಡಿಸಿದರು.
ಜಿಲ್ಲಾಮಟ್ಟದ ಸಮಿತಿಗಳಿಗೆ ಶಕ್ತಿ ಇಲ್ಲ: ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ನೇತೃತ್ವದ ಶಾಲಾ ಶುಲ್ಕ ನಿಯಂತ್ರಣದ ಸಮಿತಿಗಳಿವೆ. ಆದರೆ, ಇವು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಸಮಿತಿಗಳಿಗೆ ಶಕ್ತಿ ಇಲ್ಲದಂತಾಗಿದ್ದು ಮಾರ್ಗಸೂಚಿ ನಿಯಮಗಳನ್ನು ಬದಲಾಯಿಸಿ, ಹೆಚ್ಚಿನ ಡೊನೇಷನ್ ಪಡೆಯುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಎಂಎಲ್ಸಿ ಸೂಚಿಸಿದರು.
ಸಾವಿರ ನೀರಿನ ಶುದ್ಧೀಕರಣ ಘಟಕಗಳ ಸ್ಥಾಪನೆಗೆ ಕ್ರಮ: ಕ್ಷೇತ್ರಾಭಿವೃದ್ಧಿ ನಿಧಿಯಲ್ಲಿ ಸರ್ಕಾರಿ ಮತ್ತು ಅನುದಾನಿತ ಸೇರಿ 1 ಸಾವಿರ ಶಾಲೆಗಳಲ್ಲಿ ಕುಡಿಯುವ ನೀರಿನ ಶುದ್ಧೀಕರಣ ಘಟಕ ಸ್ಥಾಪನೆ ಗುರಿ ಹೊಂದಲಾಗಿದೆ. ಅದರಲ್ಲೂ ಫ್ಲೋರೈಡ್ ನೀರಿನ ಸಮಸ್ಯೆಯಿಂದ ತತ್ತರಿಸಿರುವ ಚಿಕ್ಕಬಳ್ಳಾಪುರ ಜಿಲ್ಲೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ನಾರಾಯಣಸ್ವಾಮಿ ತಿಳಿಸಿದರು.