ಜಿಲ್ಲೆ

ಎಂಎಸ್‌ಎಂಇಗಳಿಂದ ಕಚ್ಚಾವಸ್ತು ಖರೀದಿಗೆ ಆದ್ಯತೆ: ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು: ದೇಶದ ದೊಡ್ಡ ಕೈಗಾರಿಕೆಗಳು ಹಾಗೂ ಸಾರ್ವಜನಿಕ ಉದ್ದಿಮೆಗಳು ಹೊರ ದೇಶದಿಂದ ಆಮದು ಮಾಡಿಕೊಳ್ಳುತ್ತಿರುವ ಬಿಡಿಭಾಗಗಳ ಸಂಗ್ರಹಣೆಗೆ ದೇಶದಲ್ಲಿರುವ ಎಂಎಸ್‌ಎಂಇಗಳಿಗೆ ಆದ್ಯತೆ ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ನಗರದ ಅರಮನೆ ಮೈದಾನದಲ್ಲಿ ಭಾರತ ಸರಕಾರದ ಎಂಎಸ್‌ಎಂಇ ಮಂತ್ರಾಲಯದ ಸಹಯೋಗದೊಂದಿಗೆ ಫೆಡರೇಶನ್ ಆಫ್​​ ಕರ್ನಾಟಕ ಚೇಂಬರ್ಸ್ ಆಫ್​​ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಆಯೋಜಿಸಿರುವ 2 ದಿನಗಳ ಎಂಎಸ್‌ಎಂಇ ಸಮಾವೇಶ - 2024ಕ್ಕೆ ಚಾಲನೆ ನೀಡಿ ಶುಕ್ರವಾರ ಮಾತನಾಡಿದರು.

ದೇಶದ ಕೈಗಾರಿಕಾ ಕ್ಷೇತ್ರಕ್ಕೆ ಎಂಎಸ್‌ಎಂಸಿಗಳ ಕೊಡುಗೆ ಅಪಾರವಾಗಿದೆ. ಹೆಚ್ಚಿನ ಉದ್ಯೋಗ ಸೃಷ್ಟಿಗೂ ಎಂಎಸ್‌ಎಂಇಗಳು ಕಾರಣವಾಗಿವೆ. ಇವುಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಈ ಬಾರಿಯ ಆಯವ್ಯಯದಲ್ಲಿ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ. ಈ ಕ್ಷೇತ್ರದಲ್ಲಿರುವ ಮಾನವ ಸಂಪನ್ಮೂಲದ ಕೌಶಲ್ಯವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕಾಗಿದೆ. ಹೊಸ ಕೈಗಾರಿಕೆಗಳನ್ನು ಪ್ರಾರಂಭಿಸಲು ಇರುವ ಸಬ್ಸಿಡಿಗಳನ್ನು ಪಡೆಯಲು ಪ್ರತಿ ವರ್ಷ ಸುಮಾರು 5 ಲಕ್ಷ ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ನಮ್ಮ ಇಲಾಖೆಯಿಂದ ಕೇವಲ 90 ಸಾವಿರ ಜನರಿಗೆ ಮಾತ್ರ ಸಬ್ಸಿಡಿ ನೀಡಲು ಸಾಧ್ಯವಾಗುತ್ತಿದೆ. ಇದನ್ನ ಹೆಚ್ಚಿಸುವ ನಿಟ್ಟಿನಲ್ಲಿ ನಮ್ಮ ಇಲಾಖೆಗೆ ಹೆಚ್ಚಿನ ಅನುದಾನ ನೀಡುವಂತೆ ಹಣಕಾಸು ಸಚಿವರಿಗೆ ಮನವಿ ಸಲ್ಲಿಸಿದ್ದೇವೆ ಎಂದರು.

ಕೇಂದ್ರ ಸರಕಾರ ನೀತಿ ನಿರೂಪಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದೇ ರೀತಿಯಲ್ಲಿ ಆಯಾ ರಾಜ್ಯಗಳು ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಸೌಕರ್ಯ ಕಲ್ಪಿಸುತ್ತವೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಮಧ್ಯೆ ಅಗತ್ಯ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ಆಯೋಜಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ. ಈಗಾಗಲೇ ಕಾರ್ಮಿಕ ಇಲಾಖೆಯಲ್ಲಿ ಈ ರೀತಿಯ ಸಭೆಯನ್ನು ನಡೆಲಾಗುತ್ತಿದೆ ಎಂದು ಸಚಿವರು ವಿವರಿಸಿದರು.

ಎಂಎಸ್‌ಎಂಇ ಬೆಳವಣಿಗೆ ಅಗತ್ಯ:

ಎಫ್‌ಕೆಸಿಸಿಐ ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ ಮಾತನಾಡಿ, ಎರಡು ದಿನಗಳ ಕಾಲ ನಡೆಯಲಿರುವ ಈ ಸಮ್ಮೇಳನದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸ್ಥಾಪನೆಗೆ ಹಾಗೂ ಅವುಗಳ ಅಭಿವೃದ್ದಿಗೆ ಅಗತ್ಯವಿರುವ ಮಾಹಿತಿಯನ್ನು ಪಡೆಯುವಂತಹ ವೇದಿಕೆಯನ್ನು ಒದಗಿಸಲಾಗಿದೆ. ಎಂಎಸ್‌ಎಂಇಗಳು ನಮ್ಮ ಕೈಗಾರಿಕಾ ಕ್ಷೇತ್ರದ ಬುನಾದಿಗಳಾಗಿವೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಈ ಕೈಗಾರಿಕೆಗಳ ಅಭಿವೃದ್ದಿಗೆ ಹಲವಾರು ಯೋಜನೆಗಳನ್ನು ರೂಪಿಸಿವೆ. ಎಂಎಸ್‌ಎಂಇ ಕಾನ್‌ಕ್ಲೇವ್ - 2024 ಕರ್ನಾಟಕ ರಾಜ್ಯದಲ್ಲಿ ಎಂಎಸ್‌ಎಂಇಗಳ ಬೆಳವಣಿಗೆ ಮತ್ತು ಸುಸ್ಥಿರತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಮ್ಮ ನಿರಂತರ ಬದ್ಧತೆಯನ್ನು ಪ್ರತಿಬಿಂಬಿಸುವ ಮಹತ್ವದ ವೇದಿಕೆಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಎಫ್‌ಕೆಸಿಸಿಐ ಪ್ರಸಿಡೆಂಟ್ ಎಲೆಕ್ಟ್ ಎಂ.ಜಿ ಬಾಲಕೃಷ್ಣ, ಹಿರಿಯ ಉಪಾಧ್ಯಕ್ಷ ಉಮಾ ರೆಡ್ಡಿ, ಎಫ್‌ಕೆಸಿಸಿಐ ಇಂಡಸ್ಟ್ರಿ ಕಮಿಟಿ ಅಧ್ಯಕ್ಷ ಅರವಿಂದ ಬುರ್ಜಿ, ಕಾಸಿಯಾ ಅಧ್ಯಕ್ಷ ಎಂ.ಜಿ ರಾಜಗೋಪಾಲ್, ಪೀಣ್ಯ ಇಂಡಸ್ಟ್ರಿಯ ಅಸೋಸಿಯೇಷನ್ ಅಧ್ಯಕ್ಷ ಶಿವಕುಮಾರ್ ಉಪಸ್ಥಿತರಿದ್ದರು.