ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಪಿರಿಯಾಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿಶೇಷ ಅಲಂಕೃತ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು. 
ಜಿಲ್ಲೆ

ಚಾಮುಂಡೇಶ್ವರಿ ದೇವಿಯ ಮೆರವಣಿಗೆ

ಎಂ.ರವಿ

ಪಿರಿಯಾಪಟ್ಟಣ: ಚಾಮುಂಡೇಶ್ವರಿ ಜಯಂತಿ ಅಂಗವಾಗಿ ಪಟ್ಟಣದಲ್ಲಿ ಗೊಂದಳಿ ಮರಾಠ ಸಮಾಜದವರು ಏರ್ಪಡಿಸಿದ್ದ ಪೂಜಾ ಮಹೋತ್ಸವ ಮತ್ತು ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಮೆರವಣಿಗೆ ಬುಧವಾರ ವಿಜೃಂಭಣೆಯಿಂದ ಜರುಗಿತು.

ಪಟ್ಟಣದ ನೆಹರು ರಸ್ತೆಯಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಕಳೆದ ಮೂರು ದಿನಗಳಿಂದ ವಿಶೇಷ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಲಾಗಿತ್ತು. ಪ್ರತಿದಿನ ವಿವಿಧ ಹೂಗಳಿಂದ ಅಲಂಕರಿಸಿ, ನೆರೆದಿದ್ದ ನೂರಾರು ಸಾರ್ವಜನಿಕರಿಗೆ ಪ್ರತಿದಿನ ಮಧ್ಯಾಹ್ನ ಪ್ರಸಾದ ವಿನಿಯೋಗ ಮಾಡಲಾಗುತ್ತಿತ್ತು. ಬುಧವಾರ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿದ್ದ ಮೆರವಣಿಗೆ ವಾಹನದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕೀಲುಕುದುರೆ, ಗೊಂಬೆ ಕುಣಿತ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾತಂಡಗಳು ಸಹ ಮೆರವಣಿಗೆಯಲ್ಲಿ ಭಾಗವಹಿಸಿ ಮೆರಗು ತಂದವು. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಹಾಗೂ ಪೂಜೆಗೆ ಆಗಮಿಸಿದ್ದ ನೂರಾರು ಜನರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.