ಮಡಿಕೇರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನಾ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಉಪ ಯೋಜನೆ ಕಾರ್ಯಕ್ರಮದ ಪ್ರಗತಿ ಬಗ್ಗೆ ಮಾಹಿತಿ ಪಡೆದು ಮಾತನಾಡಿರು.
ಪ್ರತೀ ತಿಂಗಳು ಪ್ರಗತಿ ಸಂಬಂಧಿಸಿದಂತೆ ಸಭೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕಿದೆ. ಆ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದರು.
ಈ ಸಂಬಂಧ ವಿವಿಧ ಇಲಾಖೆಗಳು ಕಾರ್ಯಕ್ರಮ ಅನುಷ್ಠಾನ ಪ್ರಗತಿ ಸಂಬಂಧ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶೇಖರ್ ಮಾಹಿತಿ ನೀಡಿದರು.
ಪ್ರತಿಯೊಂದು ಇಲಾಖೆಗಳು ಗೂಗಲ್ ಸ್ಪ್ರೆಡ್ ಶೀಟ್‌ನಲ್ಲಿ ಪ್ರಗತಿ ವರದಿ ಅಪ್‌ಡೇಟ್ ಮಾಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಪೌರಕಾರ್ಮಿಕರ ಕುಂದುಕೊರತೆ ಆಲಿಸಿದ ಜಿಲ್ಲಾಧಿಕಾರಿ: ಪೌರ ಕಾರ್ಮಿಕರ ಕುಂದು ಕೊರತೆ ಸಂಬಂಧಿಸಿದಂತೆ ಆಲಿಸಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ಮನೆ ನಿರ್ಮಿಸಲಾಗುವುದು. ಸರ್ಕಾರ ನೀಡುವ ಹಣದ ಜತೆಗೆ ಸ್ವತಃ ಮನೆ ನಿರ್ಮಿಸಿಕೊಳ್ಳಲು ಮುಂದೆ ಬಂದಲ್ಲಿ ಅದಕ್ಕೂ ಅವಕಾಶ ಮಾಡಲಾಗುವುದು ಎಂದರು.
ಪೌರ ಕಾರ್ಮಿಕರಾದ ಓಬಳಿರವರು ಆರೋಗ್ಯ ವಿಮೆ ಭರಿಸಿಕೊಡುವಂತೆ ಜಿಲ್ಲಾಧಿಕಾರಿಯಲ್ಲಿ ಕೋರಿದರು.
ಪೌರಕಾರ್ಮಿಕರಾದ ಲೋಕೇಶ್ ಮತ್ತು ಪುಟ್ಟಮ್ಮ ಮಾತನಾಡಿ, ಪೌರಕಾರ್ಮಿಕರಿಗೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದರು. ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.