ದೇವನಹಳ್ಳಿಯ ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ ಗುರುವಾರ ಪ್ರಗತಿ ಪರಿಶೀಲನೆ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ.ಕೆ ಫಾಹಿಂ ಮಾತನಾಡಿದರು. 
ಜಿಲ್ಲೆ

ಬಿತ್ತನೆ ಬೀಜ, ಗೊಬ್ಬರ ಕೊರತೆಯಾಗಬಾರದು

ಶಿವರಾಜ.ಎಂ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ ಸೂಚನೆ

ಜಿಪಂ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ


ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಮುಂಗಾರು ಮಳೆ ಉತ್ತಮವಾಗಿದ್ದು, ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದಾರೆ, ರೈತರಿಗೆ ಸಮರ್ಪಕ ಬಿತ್ತನೆ ಬೀಜ ಹಾಗೂ ಗೊಬ್ಬರ ಪೂರೈಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ.ಕೆ ಫಾಹಿಂ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿಯ ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ ಗುರುವಾರ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಮುಂಗಾರು ಮಳೆ ಉತ್ತಮವಾಗಿ ಆಗುತ್ತಿದೆ. ಕೃಷಿ, ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿದಂತೆ ರೈತರು ಈಗಾಗಲೇ ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದು ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಾಗದಂತೆ ರೈತ ಸಂಪರ್ಕ ಕೇಂದ್ರಗಳಲ್ಲಿ ಅಗತ್ಯ ದಾಸ್ತಾನು ಶೇಖರಿಸಿಡಿ ಎಂದರು. ಯಾವುದೇ ಕಾರಣಕ್ಕೂ ಬಿತ್ತನೆ ಬೀಜ ರಸಗೊಬ್ಬರ ಪೂರೈಕೆಯಲ್ಲಿ ಲೋಪವಾಗಬಾರದು, ಎಲ್ಲಿಯೂ ರೈತರಿಂದ ದೂರು ಬರದಂತೆ ಮುಂಜಾಗ್ರತಾ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಲಾನುಭವಿಗಳನ್ನು ಗುರುತಿಸಿ:
ಅನ್ನ ಭಾಗ್ಯ ಯೋಜನೆ ಅಡಿ ಜಿಲ್ಲೆಯಲ್ಲಿ 2,29,390 ಫಲಾನುಭವಿಗಳಿದ್ದು ಅದರಲ್ಲಿ 2,09,389 ಫಲಾನುಭವಿಗಳಿಗೆ 12,19,37,430 ರೂ.ಗಳು ಏಪ್ರಿಲ್ ತಿಂಗಳಲ್ಲಿ ಜಮೆಯಾಗಿದೆ. ಆಧಾರ್ ಕಾರ್ಡ್ ಇ- ಕೆವೈಸಿ ಸಮಸ್ಯೆ ಹಾಗೂ ಇನ್ನಿತರ ಕಾರಣಗಳಿಂದ ಇತರೆ ಅರ್ಹ ಫಲಾನುಭವಿಗಳು ಸೌಲಭ್ಯ ವಂಚಿತರಾಗುತ್ತಿದ್ದಾರೆ. ಅಂತಹ ಫಲಾನುಭವಿಗಳನ್ನು ಗುರ್ತಿಸಿ ಸಮಸ್ಯೆ ಬಗೆಹರಿಸಲು ಕ್ರಮ ವಹಿಸಿ ಎಂದು ಸಲ್ಮಾ ಹೇಳಿದರು. ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆ ಅಡಿ 3,57,122 ಕುಟುಂಬಗಳು 200 ಯೂನಿಟ್‌ಗಿಂತ ಕಡಿಮೆ ವಿದ್ಯುತ್ ಬಳಸುವವರಿದ್ದಾರೆ ಅವರಲ್ಲಿ 3,16,054 ಕುಟುಂಬಗಳು ಗೃಹಜ್ಯೋತಿಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
344 ಕೋಟಿ ಗೃಹಲಕ್ಷ್ಮಿ ಹಣ ಜಮೆ:
ಗೃಹ ಲಕ್ಷ್ಮಿ ಯೋಜನೆ ಆರಂಭವಾದ ದಿನದಿಂದ ಇಲ್ಲಿಯವರೆಗೂ ಜಿಲ್ಲೆಯಲ್ಲಿ 17,39,675 ಫಲಾನುಭವಿಗಳಿಗೆ 3,44,10,60,000 ರೂಗಳು ಹಣ ವರ್ಗಾಯಿಸಲಾಗಿದೆ. ಮೇ ತಿಂಗಳವರೆಗೆ 2,03,184 ಫಲಾನುಭವಿಗಳು ನೋಂದಣಿ ಆಗಿದ್ದು ಮೇ ನಲ್ಲಿ 40,63,68,000 ರೂಪಾಯಿ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ. ಬಾಕಿ ಇರುವ ಫಲಾನುಭವಿಗಳಿಗೆ ಗ್ರಾಮಮಟ್ಟದಲ್ಲಿ ಪ್ರಚಾರ ಮಾಡಿ, ಜಾಗೃತಿ ಮೂಡಿಸಿ ನೋಂದಾಯಿಸಿಕೊಳ್ಳಲು ಕ್ರಮವಹಿಸಿ, ಗೃಹಲಕ್ಷ್ಮೀ ಯೋಜನೆಗೆ ನೋಂದಾಯಿಸುವ ಕೇಂದ್ರಗಳಿಗೆ ಭೇಟಿ ನೀಡಿ ನೋಂದಾವಣೆ ಪ್ರಕ್ರಿಯೆಯನ್ನು ಪರಿಶೀಲಿಸಿ ಎಂದು ಉಸ್ತುವಾರಿ ಕಾರ್ಯದರ್ಶಿ ಹೇಳಿದರು.