ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಶಾಲಾ-ಕಾಲೇಜುಗಳ ಆವರಣಗಳಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಶಾಲೆಗಳಿಂದ 100 ಮೀಟರ್ ಅಂತರದಲ್ಲಿ ತಂಬಾಕು ಪ್ರದೇಶಗಳು ಕಂಡುಬರದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಸೂಚಿಸಿದರು.
ದೇವನಹಳ್ಳಿ ತಾಲೂಕು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.0 ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು. 2024 ಏಪ್ರಿಲ್ನಿಂದ ಸೆಪ್ಟೆಂಬರ್‌ವರೆಗೆ ಜಿಲ್ಲೆಯಲ್ಲಿ ತಂಬಾಕು ತ್ಯಜಿಸಿದ ರೋಗಿಗಳ ಸಂಖ್ಯೆ 265 ಆಗಿದೆ. ಇದೇ ರೀತಿ ಇನ್ನು ಹೆಚ್ಚಿನ ಮಟ್ಟದಲ್ಲಿ ತಂಬಾಕನ್ನು ನಿಯಂತ್ರಿಸಲು ಜಿಲ್ಲಾ ಹಾಗೂ ತಾಲೂಕು ಮತ್ತು ಸ್ಥಳೀಯ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯದಿಂದ ಕಾರ್ಯ ಪ್ರವೃತ್ತರಾಗಿ ತಂಬಾಕು ನಿಯಂತ್ರಣಕ್ಕೆ ಕ್ರಮವಹಿಸಬೇಕು ಎಂದು ಸೂಚಿಸಿದರು. ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳು ಹಾಗೂ ತಂಬಾಕು ನಿಯಂತ್ರಣ ಕಾನೂನು ಕೊಟ್ಪಾ 2003ರ ಕಾಯ್ದೆ ಬಗ್ಗೆ ಶಾಲಾ ಮಕ್ಕಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಿ. ಸಾರ್ವಜನಿಕ ಸ್ಥಳಗಳಲ್ಲಿ, ಶಾಲಾ ಕಾಲೇಜುಗಳಲ್ಲಿ, ಅಂಗಡಿಗಳಲ್ಲಿ ಕೈಗಾರಿಕೆಗಳಲ್ಲಿ ತಂಬಾಕು ಸೇವನೆ ನಿಷೇಧ ಬಗೆಗಿನ ನಾಮಫಲಕಗಳನ್ನು ಪ್ರದರ್ಶಿಸುತ್ತಿದ್ದಾರೆ ಎಂಬುದನ್ನು ಪರಿಶೀಲಿಸಿ ಯಾರು ಪ್ರದರ್ಶಿಸುತ್ತಿಲ್ಲ ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು , ತಂಬಾಕು ವ್ಯಸನೆಯಿಂದ ಆರೋಗ್ಯ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಕಾಲ ಕಾಲಕ್ಕೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧ: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧಿಸಲಾಗಿದೆ. ಇದರನ್ವಯ ಸಾರ್ವಜನಿಕ ಸ್ಥಳಗಳಲ್ಲಿ ಮಾಲೀಕರು ನಾಮಫಲಕಗಳನ್ನು ಪ್ರದರ್ಶಿಸಬೇಕು. ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು ಉತ್ತೇಜನ, ಪ್ರಾಯೋಜಕತೆ ನಿಷೇಧ ಮಾಡಲಾಗಿದೆ. ಇದರ ಅನ್ವಯ ತಂಬಾಕು ಉತ್ಪನ್ನಗಳ ಮಾರಾಟ ಮಾಡುವ ಅಂಗಡಿಗಳಲ್ಲಿ ತಂಬಾಕು ಜಾಹೀರಾತುಗಳನ್ನು ಪ್ರಚಾರ ಮಾಡುವಂತಿಲ್ಲ, ದೃಶ್ಯ ಹಾಗೂ ಮುದ್ರಣ ಮಾಧ್ಯಮದ ಮೂಲಕ ತಂಬಾಕು ಉತ್ಪನ್ನಗಳ ಜಾಹೀರಾತು ಮಾಡುವಂತಿಲ್ಲ. 18 ವರ್ಷದೊಳಗಿನ ಮಕ್ಕಳಿಗೆ ಮಾರಾಟ ಮಾಡುವಂತಿಲ್ಲ. ಈ ಕಾನೂನುಗಳನ್ನು ಉಲ್ಲಂಘಿಸಿದಲ್ಲಿ ದಂಡ ಹಾಗೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತ ಎಂದು ಡಿಸಿ ಹೇಳಿದರು.
ಪ್ರಕರಣ ದಾಖಲಿಸಿ: ತಂಬಾಕು ವ್ಯಸನಿಗಳನ್ನು ಪತ್ತೆ ಮಾಡಿ ಸಮಾಲೋಚನೆ ನಡೆಸಿ, ತಂಬಾಕು ವ್ಯಸನ ಮುಕ್ತರನ್ನಾಗಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಿ ಎಂದ ಜಿಲ್ಲಾಧಿಕಾರಿಗಳು, ಕಾನೂನು ಪಾಲಿಸದೆ ತಂಬಾಕು ವಸ್ತುಗಳನ್ನು ಮಾರಾಟ ಮಾಡುವ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಅಂತವರಿಗೆ ಎಚ್ಚರಿಕೆ ನೀಡಿ, ಅಗತ್ಯವಿದ್ದಲ್ಲಿ ಪ್ರಕರಣ ದಾಖಲಿಸಿ ಎಂದು ಡಿಸಿ ಅಧಿಕಾರಿಗಳಿಗೆ ಸೂಚಿಸಿದರು. ಶಿಕ್ಷಣ ಇಲಾಖೆ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸೇರಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಿ ಕಾರ್ಯಕ್ರಮ ಯಶಸ್ವಿಯಾಗಲು ಶ್ರಮಿಸಬೇಕು ಎಂದರು.