ಮಂಡ್ಯ: ಮಂಡ್ಯ ಕೃಷಿ ಅಧಾರಿತವಾಗಿದೆ. ಆದ್ದರಿಂದ ಕೃಷಿ ಸಂಸ್ಕರಣೆಗೆ ಸಂಬಂಧಿಸಿದ ಉದ್ದಿಮೆಗಳ ಪ್ರಾರಂಭಕ್ಕೆ ಆದ್ಯತೆ ನೀಡಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಪಿ.ಸಿ.ಜಾಫರ್ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೃಷಿ ಆಧಾರಿತ ಸಂಸ್ಕರಣಾ ಉದ್ದಿಮೆಗೆ ಹೆಚ್ಚು ಬೇಡಿಕೆ ಇದೆ. ರೈತರಿಗೆ ಮೌಲ್ಯವರ್ಧಿತ ಬೆಳೆ ಬೆಳೆಯುವಂತೆ ಪ್ರೋತ್ಸಾಹಿಸಿ. ಜಿಲ್ಲೆಯಲ್ಲಿ 69,000 ಹೆಕ್ಟೇರ್ ತೆಂಗು ಬೆಳೆ ಇದ್ದು, ತೋಟಗಾರಿಕೆ, ಕೃಷಿ, ಪರಿಸರ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದವರು ಒಟ್ಟಿಗೆ ಸೇರಿ ಯೋಜಿಸಿ ಎಂದು ತಿಳಿಸಿದರು.
ಆರೋಗ್ಯ ಇಲಾಖೆಯಲ್ಲಿ ಜಿಲ್ಲೆಗೆ ಮಂಜೂರಾಗಿರುವ ಎಲ್ಲ ನಮ್ಮ ಕ್ಲಿನಿಕ್‌ಗಳ ಕಾರ್ಯ ಶೀಘ್ರವಾಗಿ ಪ್ರಾರಂಭವಾಗಬೇಕು. ಗ್ರಾಮೀಣ ಸೇವೆ ಮಾಡುತ್ತಿರುವ ವೈದ್ಯರ ಸಂಬಳ ಪಾವತಿಯ ಬಗ್ಗೆ ಹಾಗೂ ಜಿಲ್ಲೆಯಲ್ಲಿ ಡಯಾಲಿಸಿಸ್ ಸೆಂಟರ್ ಗಳ ಕಾರ್ಯನಿರ್ವಹಣೆಯ ಬಗ್ಗೆ ಗಮನಹರಿಸಬೇಕು. ಸಮಾಜ ಕಲ್ಯಾಣ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಬೇಕು. ನಿಯಾಮಾವಳಿಗಳಂತೆ ಗುಣಮಟ್ಟದ ಆಹಾರವನ್ನು ವಿದ್ಯಾರ್ಥಿಗಳಿಗೆ ನೀಡಬೇಕು. ಜಿಲ್ಲಾಮಟ್ಟದ ಅಧಿಕಾರಿಗಳು ಹಾಸ್ಟೆಲ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದರು.
ಮಿಮ್ಸ್ ನಿರ್ದೇಶಕ ಡಾ.ಬಿ.ಜೆ.ಮಹೇಂದ್ರ ಮಾತನಾಡಿ, ಕ್ಯಾನ್ಸರ್ ಆಸ್ಪತ್ರೆ ಪ್ರಾರಂಭಿಸಲು ಬೇಕಿರುವ ಉಪಕರಣಗಳನ್ನು ಖರೀದಿಸಲು ರಾಜ್ಯಮಟ್ಟದಲ್ಲಿ ಟೆಂಡರ್ ಕರೆಯಬೇಕಿರುತ್ತದೆ ಎಂದು ಮಾಹಿತಿ ನೀಡಿದಾಗ ಈ ಕುರಿತಂತೆ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಕಾರ್ಯದರ್ಶಿ ತಿಳಿಸಿದರು. ಅಂತೆಯ ಗೃಹಲಕ್ಷ್ಮೀ ಯೋಜನೆ ನೋಂದಣಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಂಡರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸೀಫ್ ಇತರರಿದ್ದರು.