ಜಿಲ್ಲೆ

ಸಾರ್ವಜನಿಕರಿಗೆ ಸಮಸ್ಯೆಯಾದರೆ ಶಿಸ್ತು ಕ್ರಮ: ಶಾಸಕ ಪಿ.ಎಂ ನರೇಂದ್ರಸ್ವಾಮಿ ಎಚ್ಚರಿಕೆ

ಕೆ.ಎನ್.ರಾಘವೇಂದ್ರ

ಮಳವಳ್ಳಿ: ಸರ್ಕಾರಿ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳು ಸಮರ್ಪಕವಾಗಿ ಆಗುತ್ತಿಲ್ಲವೆಂಬ ದೂರುಗಳಿವೆ. ಜತೆಗೆ ಮಧ್ಯವರ್ತಿಗಳ ಹಾವಳಿಯೂ ಹೆಚ್ಚಾಗಿದೆ. ಇಂತಹ ಸಮಸ್ಯೆ ಸರಿಪಡಿಸಿಕೊಳ್ಳದಿದ್ದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಎಚ್ಚರಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರ ಅಹವಾಲು ಸ್ವೀಕರಿಸಿ ಸಮಸ್ಯೆಗಳನ್ನು ಅಧಿಕಾರಿಗಳು ಬಗೆಹರಿಸಬೇಕು. ಹೊಂದಾಣಿಕೆಯಿಂದ ಕೆಲಸ ನಿರ್ವಹಿಸಿದರೇ ಸಾರ್ವಜನಿಕರ ಸಮಸ್ಯೆಗಳು ಸುಲಭವಾಗಿ ಬಗೆಹರಿಯುತ್ತವೆ. ಉತ್ತಮವಾಗಿ ಕೆಲಸ ನಿರ್ವಹಿಸಿದರೇ ನಮಗೂ ಒಳ್ಳೆಯ ಹೆಸರು ಬರುತ್ತದೆ ಎಂದು ತಿಳಿವಳಿಕೆ ಹೇಳಿದ ನರೇಂದ್ರಸ್ವಾಮಿ, ಅಧಿಕಾರಿಗಳನ್ನು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡಲಾಗಿದೆ. ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಕೊಟ್ಟಿದ್ದರೂ ಕೂಡ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾದರೇ ಸಹಿಸುವುದಿಲ್ಲ ಎಂದು ಹೇಳಿದರು.

ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟವಾಗದಂತೆ ಅಬಕಾರಿ ಅಧಿಕಾರಿಗಳು ಎಚ್ಚರ ವಹಿಸಬೇಕು. ಮುರಾರ್ಜಿ ವಸತಿ ಶಾಲೆಗಳಲ್ಲಿ ಹಾಕಲಾಗಿರುವ ಸಿಸಿ ಕ್ಯಾಮೆರಾ ಕೆಲಸ ನಿರ್ವಹಿಸುತ್ತಿಲ್ಲದಿರುವ ಬಗ್ಗೆ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿ ಸರಿಪಡಿಸಬೇಕು. ಜತೆಗೆ ತಾಲೂಕು ಮಟ್ಟದ ಅಧಿಕಾರಿಗಳು ಶಾಲಾ ಕಾಲೇಜಿಗೆ ಭೇಟಿ ನೀಡಿ ಸೌಲಭ್ಯದ ಬಗ್ಗೆ ಮಾಹಿತಿ ಪಡೆಯಬೇಕು. ಅಂತೆಯೇ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಬೇಕಾದ ಸವಲತ್ತು ಒದಗಿಸಲಾಗುವುದು. ಕ್ಲಸ್ಟರ್ ಮಟ್ಟದಲ್ಲಿ ಮಲ್ಟಿಮೀಡಿಯಾ ಸೆಂಟರ್‌ಗಳನ್ನು ಸ್ಥಾಪಿಸಿ ವಿದ್ಯಾರ್ಥಿಗಳ ಉಪಯೋಗಕ್ಕೆ ನೀಡಲಾಗುವುದು. ಎಸ್‌ಡಿಎಂಸಿ ಆಡಳಿತ ಮಂಡಳಿ ಮಲ್ಟಿಮಿಡಿಯಾ ಸೆಂಟರ್‌ಗೆ ವಿದ್ಯಾರ್ಥಿಗಳು ಹೋಗಿ ಬರಲು ವಾಹನದ ವ್ಯವಸ್ಥೆಯನ್ನು ಕಲ್ಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶೇಷ ಸೌಲಭ್ಯವನ್ನು ನೀಡಲಾಗುತ್ತಿದ್ದು, ಸಾರ್ವಜನಿಕರು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಆರೋಗ್ಯ ಇಲಾಖೆ ವತಿಯಿಂದ ಉಚಿತ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಸಾರ್ವಜನಿಕ ಆಸ್ಪತೆ ಆಡಳಿತಾಧಿಕಾರಿ ಡಾ.ಸಂಜಯ್ ಹಾಗೂ ತಾಲೂಕು ವೈದ್ಯಾಧಿಕಾರಿ ಡಾ.ವೀರಭದ್ರಪ್ಪ ಅವರಿಗೆ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ ಮಾತನಾಡಿ, ಹಿಂದಿನ ದಿನಗಳಲ್ಲಿ ಶಿಕ್ಷಣ ಇಲಾಖೆಗೆ ದಾನವನ್ನು ನೀಡಿರುವ ಆಸ್ತಿಗಳನ್ನು ಸಂರಕ್ಷಣೆ ಮಾಡಿಕೊಳ್ಳಲು ಅಧಿಕಾರಿಗಳು ಮುಂದಾಗಬೇಕು. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಶಾಲೆಗೆ ದಾನವನ್ನು ನೀಡಿರುವ ಆಸ್ತಿಗಳ ಮೇಲೆ ಕೇಸು ದಾಖಲಿಸುತ್ತಿದ್ದಾರೆ. ದಾನವಾಗಿ ನೀಡಿರುವ ಆಸ್ತಿ ಶಿಕ್ಷಣ ಇಲಾಖೆ ಹೆಸರಿಗೆ ಬಂದಿಲ್ಲ. ಇಂತಹ ಪ್ರಕರಣಗಳ ಬಗ್ಗೆ ತ್ವರಿತವಾಗಿ ಕ್ರಮ ವಹಿಸಬೇಕು. ಶಿಕ್ಷಕರ ವೈದ್ಯಕೀಯ ಬಿಲ್ ಬಾಕಿ ಉಳಿಯಬಾರದು ಎಂದು ಬಿಇಒ ವಿ.ಇ.ಉಮಾ ಅವರಿಗೆ ಸೂಚಿಸಿ ಶೌಚಗೃಹ, ಕಟ್ಟಡದ ದುರಸ್ತಿಗೆ ಅಗತ್ಯ ಅನುದಾನ ನೀಡಲಾಗುವುದು ಎಂದರು.

ಸಭೆಯಲ್ಲಿ ತಹಸೀಲ್ದಾರ್ ಎಸ್.ವಿ.ಲೊಕೇಶ್, ತಾ.ಪಂ ಇಒ ಎಚ್.ಜಿ.ಶ್ರೀನಿವಾಸ್, ಡಿವೈಎಸ್‌ಪಿ ಪಿ.ಕೃಷ್ಣಪ್ಪ, ತಾಲೂಕು ಉಸ್ತುವಾರಿ ಕಾರ್ಯದರ್ಶಿ ಸುಶೀಲಮ್ಮ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಮಹದೇವು ಇದ್ದರು.