ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಆಗ್ರಹಿಸಿ ನಗರದಲ್ಲಿ ಬುಧವಾರ ಉದ್ಯೋಗಾಂಕ್ಷಿಗಳ ಹೋರಾಟ ಸಮಿತಿಯಿಂದ ಪ್ರತಿಭಟಿಸಲಾಯಿತು.
ನಗರದ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಉದ್ಯೋಗಾಂಕ್ಷಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಘೋಷಣೆ ಕೂಗಿ, ಫಲಕಗಳನ್ನು ಪ್ರದರ್ಶಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ರಾಜ್ಯ ಸರ್ಕಾರಕ್ಕೆ ಮನವಿ ರವಾನಿಸಿದರು.
ವಿವಿಧ ಇಲಾಖೆಗಳಲ್ಲಿ 2.86 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಉಳಿದಿವೆ. ಶಿಕ್ಷಣ, ಆರೋಗ್ಯ, ವಸತಿ, ಇಂಧನ ಸೇರಿದಂತೆ ಮೂಲಭೂತ ವಲಯಗಳಲ್ಲಿ ಅಗತ್ಯಕ್ಕೆ ತಕ್ಕ ನೇಮಕಾತಿಗಳಾಗುತ್ತಿಲ್ಲ. ಖಾಲಿ ಹುದ್ದೆಗಳಿಗೆ ದಿನಗೂಲಿ, ಗುತ್ತಿಗೆ, ಅರೆ-ಗುತ್ತಿಗೆ, ಅತಿಥಿ ಹೆಸರಿನಲ್ಲಿ ದುಡಿಸಿಕೊಳ್ಳುತ್ತಿರುವುದು ಸರಿಯಲ್ಲ. ರಾಜ್ಯದಲ್ಲಿ ಐದಾರು ವರ್ಷಗಳಿಂದ ಯಾವುದೇ ನೇಮಕಾತಿಗಳಾಗುತ್ತಿಲ್ಲ. ಜತೆಗೆ ಉದ್ಯೋಗಾಂಕ್ಷಿಗಳ ವಯೋಮಿತಿಯೂ ಮೀರುತ್ತಿದೆ ಎಂದು ಅಳಲು ತೋಡಿಕೊಂಡರು.
ಸರ್ಕಾರಿ ಕ್ಷೇತ್ರದಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಚುರುಕುಗೊಳಿಸಬೇಕು. ಈಗಿರುವ ವಯೋಮಿತಿಗಳಲ್ಲಿ ಕನಿಷ್ಠ ಐದು ವರ್ಷ ಸಡಿಲಿಕೆ ಮಾಡಬೇಕು. ರಾಜ್ಯ ಸರ್ಕಾರದಿಂದ ತಡೆಹಿಡಿದ ಎಲ್ಲಾ ನೇಮಕಾತಿ ಪ್ರಕ್ರಿಯೆಗಳನ್ನು ಪುನರಾರಂಭಿಸಬೇಕು. ಶಾಲೆಗಳಲ್ಲಿ ಸಂಗೀತ, ರಂಗಕಲೆ, ಚಿತ್ರಕಲೆ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು. ಕೆಪಿಎಸ್‌ಸಿಯಲ್ಲಿ ನಡೆಯುವ ಅಕ್ರಮ ಮತ್ತು ಭ್ರಷ್ಟಾಚಾರಗಳನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿದರು.
ರಾಜು ಗಾಣಗಿ, ಸಿದ್ಧಲಿಂಗ ಬಾಗೇವಾಡಿ, ವಿನಯ ಸಾರಥಿ, ಪ್ರೀತಿ ಸಿಂಗಾಡೆ, ನಾಗರಾಜ, ಸಿದ್ದು ಪಾಟೀಲ ಇತರರಿದ್ದರು.