ಜಿಲ್ಲೆ

ವಿವಿಧ ಬೇಡಿಕೆ ಈಡೇರಿಸುವಂತೆ ಪಟ್ಟು

ರೇಷ್ಮೆ ನಗರ ಡೆಸ್ಕ್

ರಾಮನಗರ : ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಿ ಕಂದಾಯ ಇಲಾಖಾ ನೌಕರರ ಸಂಘದಿಂದ ಸೋಮವಾರ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಮೂಲಕ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು.

ಕಂದಾಯ ಇಲಾಖೆಯಿಂದ ಅಭಿವೃದ್ಧಿ ಪಡಿಸಿರುವ 17ಕ್ಕೂ ಅಧಿಕ ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯವಿರುವ ಮೊಬೈಲ್, ಲ್ಯಾಪ್‌ಟಾಪ್ ಹಾಗೂ ಅದಕ್ಕೆ ಅವಶ್ಯಕವಾಗಿರುವ ಇಂಟರ್‌ನೆಟ್, ಸ್ಕ್ಯಾನರ್ ಒದಗಿಸಿಲ್ಲ. ಕ್ಷೇತ್ರಮಟ್ಟದಲ್ಲಿ ಅಧಿಕ ಒತ್ತಡದೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ಅಲ್ಲದೆ, ಮಾನಸಿಕ ಹಾಗೂ ದೈಹಿಕವಾಗಿ ವ್ಯತಿರಿಕ್ತ ಪರಿಣಾಮ ಹೆಚ್ಚಾಗುತ್ತಿದೆ ಎಂದು ಪದಾಧಿಕಾರಿಗಳು ದೂರಿದರು.

ವೃತ್ತಕ್ಕೆ ಒಂದರಂತೆ ಮೊಬೈಲ್, ಲ್ಯಾಪ್‌ಟಾಪ್, ಗೂಗಲ್ ಕ್ರೋಮ್, ಬುಕ್, ಪ್ರಿಂಟರ್, ಇಂಟರ್ ನೆಟ್ ಸೌಲಭ್ಯ ನೀಡುವವರೆಗೆ ಮೊಬೈಲ್ ತಂತ್ರಾಂಶಗಳಾದ ಆಧಾರ್ ಸೀಡ್, ಲ್ಯಾಂಡ್ ಬೀಟ್, ಬಗರ್ ಹುಕುಂ, ಹಕ್ಕುಪತ್ರ, ನಮೂನೆ 1-5ರ ವೆಬ್ ಅಪ್ಲಿಕೇಷನ್, ಪೌತಿ ಆಂದೋಲನ ಆ್ಯಪ್ ಕೆಲಸ ನಿರ್ವಹಿಸದಿರಲು ತೀರ್ಮಾನಿಸಲಾಗಿದೆ ಎಂದು ಪದಾಧಿಕಾರಿಗಳು ತಿಳಿಸಿದರು.

ಗ್ರಾಮ ಆಡಳಿತ ಅಧಿಕಾರಿಗಳನ್ನು ರಾಜ್ಯದಲ್ಲಿನ 1196 ಗ್ರೇಡ್ -1 ಗ್ರಾಪಂ ಹಾಗೂ 304 ಕಸಬಾ ಹೋಬಳಿ ವೃತ್ತಗಳನ್ನು ಗ್ರೇಡ್ -1 ಗ್ರಾಮ ಆಡಳಿತ ಅಧಿಕಾರಿ ಹುದ್ದೆಯನ್ನಾಗಿ ಮೇಲ್ದರ್ಜೆಗೇರಿಸಿ ರಾಜಸ್ವ ನಿರೀಕ್ಷಕರು, ಪ್ರಥಮ ದರ್ಜೆ ಸಹಾಯಕರು, ಗ್ರೇಡ್ -1 ಗ್ರಾಮ ಆಡಳಿತ ಅಧಿಕಾರಿ ಹುದ್ದೆಯನ್ನಾಗಿ ಪರಿಷ್ಕರಿಸಿ ಮೇಲ್ದರ್ಜೆಗೇರಿಸಿ ಪದೋನ್ನತಿ ನೀಡಬೇಕು ಎಂದು ಒತ್ತಾಯಿಸಿದರು. ಅಂತರ ಜಿಲ್ಲಾ ಪತಿ-ಪತ್ನಿ ಪ್ರಕರಣಗಳ ವರ್ಗಾವಣೆಗೆ ಚಾಲನೆ ನೀಡಿ, ಅಂತಿಮ ಆದೇಶಕ್ಕಾಗಿ ಬಾಕಿ ಇರುವ ಪ್ರಕರಣಗಳಿಗೆ ವರ್ಗಾವಣೆ ಆದೇಶ ನೀಡಬೇಕು. ಕೆಸಿಎಸ್‌ಆರ್ ನಿಯಮಾವಳಿಗಳಂತೆ ಸರ್ಕಾರಿ ರಜಾ ದಿನಗಳಲ್ಲಿ ಕರ್ತವ್ಯಕ್ಕೆ ಮೆಮೋ ಹಾಕದಿರಲು, ಮೆಮೋ ಹಾಕುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಆದೇಶ ನೀಡಬೇಕು ಎಂದು ಒತ್ತಾಯಿಸಿದರು.

ಕಂದಾಯ ಇಲಾಖೆಯ 3 ವರ್ಷಗಳ ಸೇವೆಯನ್ನು ಪರಿಗಣಿಸಿ ಅಂತರ ಜಿಲ್ಲಾ ವರ್ಗಾವಣೆಗಾಗಿ ಕಂದಾಯ ಇಲಾಖೆಯಲ್ಲಿ ಹೊಸ ಮಾರ್ಗಸೂಚಿ ರಚಿಸಬೇಕು. ಆಯುಕ್ತಾಲಯದಡಿ ಗ್ರಾಮ ಆಡಳಿತ ಅಧಿಕಾರಿಗಳ ಜ್ಯೇಷ್ಠತೆಯನ್ನು ರಾಜ್ಯಮಟ್ಟದ ಜ್ಯೇಷ್ಠತೆಯನ್ನಾಗಿ ಪರಿಗಣಿಸಬೇಕು ಎಂದು ಗ್ರಾಮ ಆಡಳಿತ ಅಧಿಕಾರಿಗಳು ಒತ್ತಾಯಿಸಿದರು.

ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರವಾಗಿ ಇದುವರೆಗೆ ಆಗಿರುವ ಎಲ್ಲ ಅಮಾನತ್ತುಗಳನ್ನು ತಕ್ಷಣವೇ ರದ್ದು ಪಡಿಸಿ ಹಿಂಪಡೆಯಬೇಕು. ಪ್ರಯಾಣ ಭತ್ಯೆ ದರವನ್ನು 500 ರೂ.ನಿಂದ 3 ಸಾವಿರ ರೂ.ಗೆ ಹೆಚ್ಚು ಮಾಡಬೇಕು. ಕೆಲಸದ ಅವಧಿಯ ಮುನ್ನ ಹಾಗೂ ಕೆಲಸದ ಮುಕ್ತಾಯದ ನಂತರ ನಡೆಸಲಾಗುವ ಎಲ್ಲ ಬಗೆಯ ವರ್ಚುವಲ್ ಸಭೆಗಳನ್ನು ಕಡ್ಡಾಯವಾಗಿ ನಿಷೇಧಿಸಬೇಕು ಎಂದು ಆಗ್ರಹಿಸಿದರು.

ವಿಶೇಷ ಚೇತನ ಹಾಗೂ ಕೆಲವು ಅನಾರೋಗ್ಯ ಪ್ರಕರಣಗಳನ್ನು ಹೊರತು ಪಡಿಸಿ ತಾಲೂಕು ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಿಯೋಜನೆ ಮೇಲೆ ಕೆಲಸ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳನ್ನು ಅವರ ಮೂಲ ವೃತ್ತಗಳಿಗೆ ಕರ್ತವ್ಯ ನಿರ್ವಹಿಸಲು ಆದೇಶಿಸಬೇಕು. ಗ್ರಾಮ ಸಹಾಯಕರಿಗೆ ಸೇವಾ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.

ರಾಜಸ್ವ ನಿರೀಕ್ಷಕರಾದ ಪ್ರಸನ್ನಕುಮಾರ್, ಪುಟ್ಟರಾಜು, ಶಿವಕುಮಾರ್, ಗ್ರಾಮ ಲೆಕ್ಕಾಧಿಕಾರಿಗಳಾದ ಮುಭಾರಕ್, ಪರಮೇಶ, ಅಜಯ್, ಸಂಗೀತ, ಸುಷ್ಮಾ, ಸೌಮ್ಯ, ರೇಣವಬಸಪ್ಪ, ಮೇಘನಾ, ಪವಿತ್ರಾ, ಸಂಗೀತಾ, ಸುರೇಶ್ ಕುಮಾರ್ ಇದ್ದರು.