ಮೈಸೂರು: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕಪ್ಪು ಪಟ್ಟಿ ಧರಿಸಿ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಪುರಭವನದ ಎದುರು ಜಮಾವಣೆಗೊಂಡ ಪ್ರತಿಭಟನಾಕಾರರು, ಜಾರಿ ನಿರ್ದೇಶನಾಲಯ(ಇಡಿ), ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಎಎಪಿ ಮುಖಂಡರ ವಿರುದ್ಧ ಉದ್ದೇಶಪೂರ್ವಕ ಆರೋಪ ಮಾಡಿ, ಮಾನಸಿಕ ಹಿಂಸೆ ನೀಡಲಾಗುತ್ತಿದೆ. ಭ್ರಷ್ಟಾಚಾರದ ಆರೋಪ ಹೊರಿಸಲಾಗಿದೆ. ಆದರೆ, ಈವರೆಗೆ ಒಂದೇ ಒಂದು ಪೈಸೆ ಭ್ರಷ್ಟಾಚಾರದ ಹಣ ವಶಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಬಂಧನದ ಮೂಲಕ ಪಕ್ಷದ ಕಾರ್ಯವೈಖರಿಯನ್ನು ಕುಂಠಿತಗೊಳಿಸುವ ಪ್ರಯತ್ನವಾಗುತ್ತಿದೆ ಎಂದು ಕಿಡಿಕಾರಿದರು
ಪ್ರಸ್ತುತ 5 ವಿಧಾನಸಭೆ ಚುನಾವಣೆಗಳು ಸೇರಿದಂತೆ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕೇಂದ್ರ ಬಿಜೆಪಿ ಸರ್ಕಾರವು ಹೀಗೆ ಮಾಡುತ್ತಿದೆ. ಸರ್ವಾಧಿಕಾರದ ಅಮಲಿನಲ್ಲಿರುವ ಬಿಜೆಪಿ, ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ತಕ್ಷಣವೇ ಬಿಡುಗಡೆಗೊಳಿಸಬೇಕು. ಇಲ್ಲದಿದ್ದರೆ ದೇಶಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಪಕ್ಷದ ಮುಖಂಡರಾದ ಮಾಲವಿಕಾ ಗುಬ್ಬಿವಾಣಿ, ಸೋಸಲೆ ಸಿದ್ದರಾಜು, ಲೋಕೇಶ್ ಇನ್ನಿತರರಿದ್ದರು.