ಜಿಲ್ಲೆ

ಬೆಳಗಾವಿಯ ದೌರ್ಜನ್ಯ ಪ್ರಕರಣ ಖಂಡಿಸಿ ಪ್ರತಿಭಟನೆ

ಮಡಿಕೇರಿ: ಬೆಳಗಾವಿಯಲ್ಲಿ ಮಹಿಳೆಯೊಬ್ಬಳನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ಎಸಗಿರುವ ಪ್ರಕರಣವನ್ನು ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.


ಈ ಸಂದರ್ಭ ಪಕ್ಷದ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಇಂತಹ ಪ್ರಕರಣಗಳು ಮರುಕಳಿಸುತ್ತಿದ್ದು, ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ೬ ತಿಂಗಳಲ್ಲೇ ಮಹಿಳೆಯರ ಮೇಲಿನ ದೌರ್ಜನ್ಯ ಎಸಗಿರುವ ಪ್ರಕರಣಗಳು ರಾಜ್ಯದಲ್ಲಿಯೇ ಮಹಿಳೆಯರಿಗೆ ರಕ್ಷಣೆಯಿಲ್ಲದಿರುವುದನ್ನು ತೋರಿಸುತ್ತದೆ. ಇದು ಸರ್ಕಾರದ ಆಡಳಿತ ವೈಫಲ್ಯ ಎಂದ ಅವರು, ಬೆಳೆಗಾವಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ ಮಹಿಳೆಯೊಬ್ಬಳ ಮನೆಯನ್ನು ಪುಡಿಮಾಡುವುದರ ಜತೆಗೆ ಬೆತ್ತಲುಗೊಳಿಸಿ ಲೈಟ್ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆ. ಇದು ಖಂಡನೀಯ ಎಂದರು.


ಬೆಳಗಾವಿ ಅಧಿವೇಶನದಲ್ಲಿ ಎರೆಡು ಶಾಸಕರು, ರಾಜ್ಯದಲ್ಲಿ ಮತ್ತೊಮ್ಮೆ ಟಿಪ್ಪು ಜಯಂತಿ ಆಚರಣೆ ಮಾಡುವಂತಾಗಬೇಕು. ಮತ್ತು ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪುವಿನ ಹೆಸರಿಡಬೇಕು ಎಂಬ ಪ್ರಸ್ತಾಪನೆ ಸಲ್ಲಿಸಿರುವುದು ಖಂಡನೀಯ. ಮತ್ತೊಮ್ಮೆ ಟಿಪ್ಪು ಜಯಂತಿ ಆಚರಣೆ ಮಾಡಲು ರಾಜ್ಯಸರ್ಕಾರ ಪ್ರಯತ್ನ ಮಾಡಿದರೆ, ರಾಜ್ಯದಲ್ಲಿ ಟಿಪ್ಪು ಜಯಂತಿಯನ್ನು ತಡೆಹಿಡಿಯಲು ಹಿಂದುಗಳು ಶಕ್ತರಾಗಿದ್ದಾರೆ ಎಂದರು.


ಪ್ರತಿಭಟನೆಯಲ್ಲಿ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತ ರಾಕೇಶ್, ಪಕ್ಷದ ಜಿಲ್ಲಾ ಉಪಾಧ್ಯಕ್ಷ ಅರುಣ್ ಕುಮಾರ್, ನಗರಾಧ್ಯಕ್ಷ ಮನು ಮಂಜುನಾಥ್, ವಕ್ತಾರ ಮಹೇಶ್ ಜೈನಿ, ಪ್ರಮುಖರಾದ ಅರುಣ್ ಶೆಟ್ಟಿ, ಸೇರಿದಂತೆ ನಗರಸಭೆ ಬಿಜೆಪಿ ಸದಸ್ಯರು, ಪಕ್ಷದ ಕಾರ್ಯಕರ್ತರಿದ್ದರು.