ಜಿಲ್ಲೆ

ರಾಜ್ಯಪಾಲರ ವಿರುದ್ಧ ಪ್ರತಿಭಟನೆ ಅಕ್ಷೇಪಾರ್ಹ

ಆರ್.ಕೃಷ್ಣ

ಮೈಸೂರು: ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರ ವಿರುದ್ಧ ಅಕ್ಷೇಪಾರ್ಹ ರೀತಿಯಲ್ಲಿ ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವಕ್ಕೆ ಶೋಭೆ ತರುವುದಿಲ್ಲ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ರವಿಕುಮಾರ್ ಬೇಸರ ವ್ಯಕ್ತಪಡಿಸಿದರು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಸೂಕ್ತವಾಗಿಯೇ ಇದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಸಮರ್ಥಿಸಿಕೊಂಡರು.
ಹೀಗಿದ್ದರೂ ಕಾಂಗ್ರೆಸ್ ನಾಯಕರು ಆಕ್ಷೇಪಾರ್ಹ ಹೇಳಿಕೆ ನೀಡುತ್ತಿದ್ದಾರೆ. ಜತೆಗೆ ಪ್ರತಿಭಟನೆಗಳ ವೇಳೆ ರಾಜ್ಯಪಾಲರ ಭಾವಚಿತ್ರವನ್ನು ಅಪಮಾನಿಸಲಾಗುತ್ತಿದೆ. ಇದಲ್ಲದೆ ಕಾಂಗ್ರೆಸ್ ನಾಯಕರು ರಕ್ತಪಾತಕ್ಕೆ ಪ್ರಚೋದನೆ ನೀಡುವ ಮಾತನ್ನು ಆಡುತ್ತಿದ್ದಾರೆ ಎಂದು ಟೀಕಿಸಿದರು.
ಇಂತಹ ಹೇಳಿಕೆ ನೀಡುವವರನ್ನು, ಆಕ್ಷೇಪಾರ್ಹವಾಗಿ ನಡೆದುಕೊಳ್ಳುವವರನ್ನು ಪೊಲೀಸರು ತಕ್ಷಣವೇ ಬಂಧಿಸಿ ಕ್ರಮಕೈಗೊಳ್ಳಬೇಕು. ಸಿದ್ದರಾಮಯ್ಯ ಅವರು ಸಂವಿಧಾನಕ್ಕೆ ಗೌರವ ಕೊಟ್ಟು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ಸೋಮಸುಂದರ್, ಎಸ್.ನಾಗೇಂದ್ರ, ರಾಜೇಗೌಡ, ರವಿಕುಮಾರ್ ಇತರರು ಇದ್ದರು.