ಜಿಲ್ಲೆ

8ರಂದು ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ

ಜಗದೀಶ ಹೊಂಬಳಿ

ಬೆಳಗಾವಿ: ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಸರ್ಕಾರಕ್ಕೆ ಎಚ್ಚರಿಕೆ ನೀಡಿದರೂ ವಿದ್ಯುತ್ ಲೋಡ್‌ಶೆಡ್ಡಿಂಗ್ ಮುಂದುವರಿಸಿದೆ. ಇದರ ವಿರುದ್ಧ ಬಿಜೆಪಿ ರೈತ ಮೋರ್ಚಾದಿಂದ ತಾಲೂಕು ಕೇಂದ್ರಗಳಲ್ಲಿ ಸೆ. 8ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸರ್ಕಾರ ಇದಕ್ಕೂ ಮಣಿಯದಿದ್ದರೆ ನಮ್ಮ ಪ್ರತಿಭಟನೆ ಜನಾಂದೋಲನ ಪಡೆಯುತ್ತದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಎಚ್ಚರಿಕೆ ನೀಡಿದರು.
 ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮೇಲೆ ಕಾಂಗ್ರೆಸ್ ಸರ್ಕಾರಕ್ಕೆ ದ್ವೇಷವಿದ್ದಿರಬಹುದು. ಆದರೆ, ರೈತ ವಿರೋಧಿ ನೀತಿ ಅನುಸರಿಸುತ್ತಿರುವುದು ಏಕೆ? 100ಕ್ಕಿಂತ ಹೆಚ್ಚು ತಾಲೂಕುಗಳಲ್ಲಿ ಬರ ಬಿದ್ದಿದೆ. ರಾಜ್ಯದ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರುನ್ನು ಬಳಸಿಕೊಳ್ಳುವುದಕ್ಕೆ ರಾಜ್ಯ ಸರ್ಕಾರ ಯೋಜನೆ ರೂಪಿಸಿಲ್ಲ. ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ನೀಡುವುದಕ್ಕೆ ಯೋಜನೆ ರೂಪಿಸಿಲ್ಲ. ರೈತರ ಸಂಕಷ್ಟಗಳನ್ನು ನಿವಾರಿಸುತ್ತಿಲ್ಲ. ಆಡಳಿತದ ಕಡೆಗೂ ಈ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
 ಮಾಜಿ ಶಾಸಕ ಅನಿಲ್ ಬೆನಕೆ, ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡೆ, ಮಹಾನಗರ ಅಧ್ಯಕ್ಷ ಕಲ್ಲಪ್ಪ ಶಹಾಪುರಕರ, ಶರತ್ ಪಾಟೀಲ ಸುದ್ದಿಗೋಷ್ಠಿಯಲ್ಲಿದ್ದರು.