ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತ ಸಂಘದ ಪದಾಧಿಕಾರಿಗಳು ಬೈಲೂರು ಚೆಕ್‌ಪೋಸ್ಟ್‌ನಲ್ಲಿ ಪ್ರತಿಭಟನೆ ನಡೆಸಿದರು. ಹೊನ್ನೂರು ಪ್ರಕಾಶ್, ಸದಾನಂದ, ಪ್ರಸಾದ್, ಸಿದ್ದಪ್ಪ ಇತರರು ಇದ್ದರು. 
ಜಿಲ್ಲೆ

ಚೆಕ್‌ಪೋಸ್ಟ್‌ನಲ್ಲಿ ವಾಹನಗಳ ಸಂಚಾರ ತಡೆದು ಪ್ರತಿಭಟನೆ

ಎಂ.ರವಿ

ಹನೂರು: ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಮಂಗಳವಾರ ರೈತ ಸಂಘಟನೆಯ ಪದಾಧಿಕಾರಿಗಳು ತಾಲೂಕಿನ ಬೈಲೂರು ಅರಣ್ಯ ಚೆಕ್‌ಪೋಸ್ಟ್‌ನಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ನೆರೆದಿದ್ದ ಪ್ರತಿಭಟನಾಕಾರರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ರೈತ ಸಂಘ ಹಾಗೂ ಹಸಿರು ಸೇನೆಯ (ಸಾಮೂಹಿಕ ನಾಯಕತ್ವ) ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ಈ ಭಾಗದಲ್ಲಿ ಕಾಡು ಪ್ರಾಣಿಗಳು ಆಗಾಗ್ಗೆ ಜಮೀನುಗಳಿಗೆ ಲಗ್ಗೆ ಇಟ್ಟು ಫಸಲನ್ನು ನಾಶಪಡಿಸುತ್ತಿದೆ. ಇದರಿಂದ ರೈತರು ಕೃಷಿಯಲ್ಲಿ ನಷ್ಟವನ್ನು ಎದುರಿಸುವಂತಾಗಿದೆ. ಇತ್ತ ನಾಶವಾದ ಬೆಳೆಗೆ ಸೂಕ್ತ ಪರಿಹಾರ ನೀಡುತ್ತಿಲ್ಲ. ಕಾಡುಪ್ರಾಣಿಗಳ ಹಾವಳಿಯನ್ನು ತಡೆಗಟ್ಟುವಂತೆ ಈ ಭಾಗದ ರೈತರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದಾರೆ. ಆದರೆ ಯಾವುದೇ ಕ್ರಮಕೈಗೊಂಡಿಲ್ಲ. ಜತೆಗೆ ರೈತರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಇದರಿಂದ ಕಷ್ಟದ ನಡುವೆ ಕೃಷಿ ಮಾಡಬೇಕಾದ ಸ್ಥಿತಿ ಇದೆ. ಇನ್ನು ಕಾಡಂಚಿನ ಗ್ರಾಮಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕ ವಿದ್ಯುತ್ ನೀಡುವಂತೆ ಸರ್ಕಾರ ಆದೇಶಿಸಿದೆ. ಆದರೆ ಈ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಈ ಭಾಗದಲ್ಲಿ ರಸ್ತೆಗಳು ಹದಗೆಟ್ಟಿವೆ. ಸಮರ್ಪಕ ಬಸ್ ಸೌಕರ್ಯವಿಲ್ಲದ ಪರಿಣಾಮ ಹೆಚ್ಚಿನ ರೀತಿಯಲ್ಲಿ ವಿದ್ಯಾರ್ಥಿಗಳು ತೊಂದರೆ ಪಡುತ್ತಿದ್ದಾರೆ. ಇತ್ತ ಬೈಲೂರು ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಸ್ವಚ್ಛತೆ ಇಲ್ಲದಂತಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಆರ್‌ಎಫ್‌ಒ ಪ್ರಮೋದ್, ಸಾರಿಗೆ ಡಿಪೋ ವ್ಯವಸ್ಥಾಪಕ ಶಂಕರ್, ಸೆಸ್ಕ್ ಎಇಇ ಶಂಕರ್, ಪಿಡಬ್ಲ್ಯುಡಿ ಎಇಇ ಪುರುಷೋತ್ತಮ್ ಹಾಗೂ ತಾಪಂ ಸಹಾಯಕ ನಿರ್ದೇಶಕಿ ರಾಧಾ ಅವರು ಸಮಸ್ಯೆಗಳನ್ನು ಆಲಿಸಿ ಹಂತಹಂತವಾಗಿ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರಲ್ಲದೆ ಮುಂದಿನ ದಿನಗಳಲ್ಲಿ ರೈತರ ಸಭೆ ಕರೆದು ಚರ್ಚಿಸಲಾಗುವುದು ಎಂದು ತಿಳಿಸಿದ ಬಳಿಕ ಪ್ರತಿಭಟನೆಯನ್ನು ಕೈ ಬಿಡಲಾಯಿತು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಸಿದ್ದಪ್ಪ, ಪ್ರಕಾಶ್, ಸದಾನಂದ, ಪ್ರಸಾದ್, ಮನೋಹರ್ ಹಾಗೂ ಇನ್ನಿತರರು ಇದ್ದರು.