ಹುಣಸೂರು: ಶೀಘ್ರ ಬೆಂಬಲ ಬೆಲೆ ಖರೀದಿ ಕೇಂದ್ರ ಸ್ಥಾಪಿಸಿ, ರೈತರಿಂದ ರಾಗಿ ಖರೀದಿಸಬೇಕು ಎಂದು ಆಗ್ರಹಿಸಿ ಮಾ.1ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ತಿಳಿಸಿದರು.
ಸಕಾಲದಲ್ಲಿ ರಾಗಿ ಕೇಂದ್ರವನ್ನು ತೆರೆಯದ ಕಾರಣ ರೈತರು ಬೆಳೆದಿರುವ ರಾಗಿ ದಲ್ಲಾಳಿಗಳ ಪಾಲಾಗುತ್ತಿದೆ. ಖರೀದಿ ಕೇಂದ್ರದ ಲಾಭವನ್ನು ದಲ್ಲಾಳಿಗಳು ಲಪಟಾಯಿಸುತ್ತಿದ್ದಾರೆ. ಈ ರೀತಿಯ ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ ಸಂಘವು ಹೋರಾಟ ಮಾಡುತ್ತಲೇ ಬರುತ್ತಿದೆ. ರೈತ ಬೆಳೆಯುವ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿಪಡಿಸದೆ ಹರಾಜು ಮಾಡುವಂತಹ ಪರಿಸ್ಥಿತಿಯಲ್ಲಿ ಇದ್ದಾರೆ. ಕನಿಷ್ಠ ಖರೀದಿ ಕೇಂದ್ರವನ್ನಾದರೂ ಸಕಾಲದಲ್ಲಿ ಸರ್ಕಾರ ತೆರೆದರೆ ರೈತರಿಗೆ ಅನುಕೂಲವಾಗುತ್ತದೆ. ಆದ್ದರಿಂದ ಕೂಡಲೇ ರಾಗಿ ಕೇಂದ್ರ ತೆರೆಯಬೇಕೆಂದು ಒತ್ತಾಯಿಸಲು ಮಾ.1ರಂದು ಬೆಳಗ್ಗೆ 10.30ಕ್ಕೆ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.