ಅರಸೀಕೆರೆ: ಎತ್ತಿನಹೊಳೆ ಯೋಜನೆಗೆ ಭೂಮಿ ಕಳೆದುಕೊಳ್ಳುತ್ತಿರುವ ರೈತರಿಗೆ ಏಕರೂಪದ ಪರಿಹಾರ ವಿತರಿಸಬೇಕು ಎಂದು ಒತ್ತಾಯಿಸಿ ರೈತ ಸಂಘದ ಮುಖಂಡರು ಹಾಗೂ ವಿವಿಧ ಗ್ರಾಮಗಳ ಗ್ರಾಮಸ್ಥರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ರೈತ ಸಂಘದ ಜಿಲ್ಲಾ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಮಾತನಾಡಿ, ಸಕಲೇಶಪುರ ಮತ್ತು ಆಲೂರು ಭಾಗದಲ್ಲಿ ರೈತರಿಗೆ ಹೆಚ್ಚಿನ ಪರಿಹಾರ ನಿಗದಿಪಡಿಸಲಾಗಿದೆ. ಆದರೆ ನಮ್ಮ ತಾಲೂಕಿನ ಅನ್ನದಾತರಿಗೆ ಅನ್ಯಾಯ ಮಾಡಲಾಗಿದೆ. ಸರ್ಕಾರ ಹಾಗೂ ಅಧಿಕಾರಿಗಳು ತಕ್ಷಣವೇ ಲೋಪ ಸರಿಪಡಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಸಿದರು.
ನಗರದ ಪ್ರವಾಸಿ ಮಂದಿರದ ಬಳಿಯಿಂದ ಮೆರವಣಿಗೆ ಆರಂಭಿಸಿದ ಪ್ರತಿಭಟನಾಕಾರರು, ತಹಸೀಲ್ದಾರ್ ಕಚೇರಿ ತಲುಪಿ ಎಂ.ಜಿ.ಸಂತೋಷ್ ಕುಮಾರ್‌ಗೆ ಮನವಿ ಸಲ್ಲಿಸಿದರು. ಹಬ್ಬನಘಟ್ಟ, ತಳಲುತೊರೆ, ಎಸ್. ಮಾಕನಹಳ್ಳಿ, ಹೆಬ್ಬಾರನಹಳ್ಳಿ, ದೊಡ್ಡೇನಹಳ್ಳಿ, ಹಾರನಹಳ್ಳಿ, ಕರಗುಂದ, ಬ್ಯಾಲದಕೆರೆ, ಕಳೆಕಲ್ಯಾಡಿ, ಉಂಡಿಗನಾಳು ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಪಾಲ್ಗೊಂಡಿದ್ದರು.