ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜೀನಾಮೆಗೆ ಒತ್ತಾಯಿಸಿ ಡಾ.ಬಿ.ಆರ್.ಅಂಬೇಡ್ಕರ್ ಸಂಘಟನೆಗಳ ಒಕ್ಕೂಟದಿಂದ ಮಂಗಳವಾರ ಪ್ರತಿಭಟನೆ ನಡೆಯಿತು.
ಇಲವಾಲ ಬಸ್ ನಿಲ್ದಾಣದಲ್ಲಿ ಜಮಾಯಿಸಿ ಒಕ್ಕ್ಕೂಟದ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು, ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಅಮಿತ್ ಷಾ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಸಂವಿಧಾನ ಹುದ್ದೆಯಲ್ಲಿದ್ದರೂ ಅಂಬೇಡ್ಕರ್ ಅವರನ್ನು ಜಪಿಸುವುದಕ್ಕಿಂತ ದೇವರನ್ನು ಜಪಿಸಿ ಎಂದಿದ್ದಾರೆ. ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನ ನೀಡುವ ಮೂಲಕ ಅವರೇ ದೇವರಾಗಿದ್ದಾರೆ. ಅವರ ಹೆಸರನ್ನು ಹೇಳಿದರೆ ಇವರಿಗೆ ಯಾಕೆ ನೋವಾಗಬೇಕು ಎಂದು ಪ್ರಶ್ನಿಸಿದರು.
ಇಲವಾಲದ ಡಾ.ಅಂಬೇಡ್ಕರ್ ಸಮುದಾಯ ಭವನದಿಂದ ಬಸ್ ನಿಲ್ದಾಣದವರೆಗೆ ಮೆರವಣಿಗೆ ನಡೆಸಿದರಲ್ಲದೇ ಮೈಸೂರು-ಹುಣಸೂರು ಮುಖ್ಯ ರಸ್ತೆಯಲ್ಲಿ ಮಾವನ ಸರಪಳಿ ನಿರ್ಮಿಸಿದರು. ಸುಮಾರು ಒಂದು ಗಂಟೆಗಳ ಕಾಲ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ಅಮಿತ್ ಷಾ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಉಪ ತಹಸೀಲ್ದಾರ್ ಕುಬೇರ ಅವರ ಮೂಲಕ ಪ್ರಧಾನಿ, ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ, ಮುಖಂಡ ಹುಯಿಲಾಳು ರಾಮಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೂರ್ಗಳ್ಳಿ ಮಹದೇವ್, ಜಿಪಂ ಮಾಜಿ ಸದಸ್ಯ ಅರುಣ್ ಕುಮಾರ್, ಯುವ ಕಾಂಗ್ರೆಸ್ ಮುಖಂಡ ಮಂಜುನಾಥ್, ಸುನೀಲ್ ಇತರರು ಇದ್ದರು.