ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಮದ್ದೂರಿನ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಮರಳಿಗ ಶಿವರಾಜ್, ಶ್ರೀನಿವಾಸ್, ಪ್ರಕಾಶ, ಪುಟ್ಟಲಿಂಗಯ್ಯ, ವೆಂಕಟರಾಮು ಇದ್ದರು. 
ಜಿಲ್ಲೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಮದ್ದೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಲಾಯಿತು.

ವಿವಿಧ ಬೇಡಿಕೆಗಳನ್ನು ಈಡೇರಿಸದ ತಾಲೂಕು ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ಮರಳಿಗ ಶಿವರಾಜ್ ಮಾತನಾಡಿ, ತಾಲೂಕು ಕಚೇರಿಯಲ್ಲಿ ಸಾರ್ವಜನಿಕರಿಂದ ಸ್ವೀಕೃತವಾದ ಅರ್ಜಿಗಳು ಸಮರ್ಪಕವಾಗಿ ವಿಲೇವಾರಿಯಾಗುತ್ತಿಲ್ಲ. ಕೆಲವು ರೈತರು ತಮ್ಮ ಜಮೀನಿನ ದಾಖಲಾತಿಗಾಗಿ ಅರ್ಜಿಗಳನ್ನು ನೀಡಿ ಕಚೇರಿಗೆ ಅಲೆದು ವರ್ಷಗಳೇ ಕಳೆದರೂ ಕೆಲಸವಾಗಿಲ್ಲ. ಇದರಿಂದ ಬೇಸರಗೊಂಡು ಅವರು ಕಚೇರಿಗೆ ಬರುವುದನ್ನೇ ಬಿಟ್ಟಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮರಳಿಗ ಗ್ರಾಮದಲ್ಲಿ ಸುಮಾರು 3 ತಲೆಮಾರುಗಳಿಂದ ಖಾಸಗಿ ಜಮೀನಿನಲ್ಲಿ ವಾಸ ಮಾಡುತ್ತಿರುವ ದಲಿತ ಜನಾಂಗಕ್ಕೆ ಹಾಗೂ ಚಾಮನಹಳ್ಳಿಯ ಜಯಂತಿ ಗ್ರಾಮದಲ್ಲಿ ವಾಸ ಮಾಡುತ್ತಿರುವ ಜನರಿಗೆ ಈ ಕೂಡಲೇ ಹಕ್ಕುಪತ್ರ ನೀಡಬೇಕು. ನಿವೇಶನ ರಹಿತರಿಗೆ ನಿವೇಶನ ಹಂಚಬೇಕು ಎಂದು ಒತ್ತಾಯಿಸಿದರು.

ಗೆಜ್ಜಲಗೆರೆ ಡೇರಿ ಮುಂಭಾಗ ರಾಷ್ಟ್ರೀಯ ಹೆದ್ದಾರಿ 275ಕ್ಕೆ ಹೊಂದಿಕೊಂಡಂತೆ ಇರುವ ಬಸವನಪುರ ಗ್ರಾಮಕ್ಕೆ ಹಾದು ಹೋಗುವ ರಸ್ತೆಗೆ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಲ್ಲಿ ಈ ಕೂಡಲೇ ಸಿ.ಸಿ.ರಸ್ತೆ ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಿದರು.

ತಾಲೂಕು ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಮಾಡದೆ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.

ತಾಲೂಕು ಕಚೇರಿಯಲ್ಲಿ ರೈತರು ಮತ್ತು ಸಾರ್ವಜನಿಕ ಕೆಲಸ ಕಾರ್ಯಗಳು ಸಮಯಕ್ಕೆ ಸರಿಯಾಗಿ ಆಗಬೇಕೆಂದರೆ ಸರ್ಕಾರದ ಆದೇಶದಂತೆ 5 ವರ್ಷ ಮೇಲ್ಪಟ್ಟು ಯಾವ ಸಿಬ್ಬಂದಿ ಕಚೇರಿಯಲ್ಲಿ ಬೇರೂರಿರುತ್ತಾರೋ ಅಂತಹ ಅಧಿಕಾರಿಗಳನ್ನು ಗುರುತಿಸಿ ಈ ಕೂಡಲೇ ವರ್ಗಾವಣೆ ಮಾಡುವ ಮೂಲಕ ರೈತರ ಹಾಗೂ ಸಾರ್ವಜನಿಕರ ಕೆಲಸ ಕಾರ್ಯಗಳು ತ್ವರಿತಗತಿಯಲ್ಲಿ ಆಗುವಂತೆ ಮಾಡಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ಅಧಿಕಾರಿಗಳ ವಿರುದ್ಧ ಉಗ್ರ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ತಹಸೀಲ್ದಾರ್ ಡಾ.ಸ್ಮೀತಾರಾಮು ಮನವಿ ಸ್ವೀಕರಿಸಿ ಮಾತನಾಡಿ, ನಾನು ಇತ್ತೀಚೆಗೆ ಅಧಿಕಾರ ಸ್ವೀಕಾರ ಮಾಡಿದ್ದೇನೆ. ನಿಮ್ಮ ಬೇಡಿಕೆಗಳ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಲಾಯಿತು.

ಪ್ರತಿಭಟನೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಶ್ರೀನಿವಾಸ್, ತಾಲೂಕು ಸಂಚಾಲಕ ಪ್ರಕಾಶ ನಿಡಘಟ್ಟ, ತಾಲೂಕು ಪದಾಧಿಕಾರಿಗಳಾದ ಪುಟ್ಟಲಿಂಗಯ್ಯ, ವೆಂಕಟರಾಮು, ಶೇಖರ್, ಗೋಪಾಲ, ಸುರೇಶ್, ಆಕಾಶ್ ಇತರರಿದ್ದರು.