ಮಡಿಕೇರಿ: ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೊಡಗು ಜಿಲ್ಲೆಯ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು.
ಸಂಘದ ಜಿಲ್ಲಾ ಅಧ್ಯಕ್ಷ ಎಂ.ಎಂ.ಶ್ಯಾಂಪ್ರಸಾದ್ ಮಾತನಾಡಿ, ಗುತ್ತಿಗೆ ನೌಕರರು, ದಿನಗೂಲಿ ನೌಕರರು ಸೇರಿದಂತೆ ಎಲ್ಲರನ್ನು ಸರ್ಕಾರ ಕಾಯಂ ಮಾಡಿದೆ. ಆದರೆ, ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವ ವಿಷಯದಲ್ಲಿ ಮಾತ್ರ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಸರ್ಕಾರ ನಮ್ಮ ಸೇವೆಯನ್ನು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಬೇಕು. ಆ ಮೂಲಕ ಜೀವನ ನಿರ್ವಹಣೆಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ವಿಧಾನಸಭೆ ಅಧಿವೇಶನದಲ್ಲಿ ನಿರ್ಧಾರ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನಂಜುಂಡಸ್ವಾಮಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರ ಸಂಘದ ಖಜಾಂಜಿ ಪೂರ್ಣಿಮಾ, ಕಾನೂನು ಸಲಹೆಗಾರರಾದ ಯಾಲದಾಳು ಮನೋಜ್ ಬೋಪಯ್ಯ, ಕಾರ್ಯದರ್ಶಿ ಸರಿತಾ, ಸಹ ಕಾರ್ಯದರ್ಶಿ ಡೀನಾ, ಸಂಘಟನಾ ಕಾರ್ಯದರ್ಶಿ ಹರ್ಷಿತ ಮತ್ತು ಕೊಡಗು ಜಿಲ್ಲೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರು ಇದ್ದರು.