ಮದ್ದೂರು: ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘವು ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಂಡಿದ್ದು, ಪಟ್ಟಣದ ಪುರಸಭೆ ಕಚೇರಿ ಆವರಣದಲ್ಲಿ ನಡೆಯುತ್ತಿರುವ ಮುಷ್ಕರ ಬುಧವಾರ ಎರಡನೇ ದಿನ ಪೂರೈಸಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ, ರಾಜ್ಯದ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಪೌರ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ ಎಂದರು.
ಪೌರ ನೌಕರರ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ನಿರ್ಣಯಗಳನ್ನು ಕೈಗೊಂಡು ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಮನವಿ ಸಲ್ಲಿಸಿ 45 ದಿನಗಳಾದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ, ಪ್ರತಿಭಟನೆಯು ಅನಿವಾರ್ಯವಾಗಿದೆ ಎಂದು ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದರು.
ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಿ ಜ್ಯೋತಿ ಸಂಜೀವಿನಿ, ಕೆಜಿಐಡಿ, ಸೇರಿದಂತೆ ಸರ್ಕಾರಿ ನೌಕರಿ ಪಡೆಯುವ ಎಲ್ಲ ಸೌಲಭ್ಯಗಳನ್ನು ನೀಡಬೇಕು. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೀರು ಸರಬರಾಜು, ಚಾಲಕರು, ಲೋಡರ್ಸ್, ಕ್ಲೀನರ್ಸ್, ಗಾರ್ಡ್ನರ್, ಸ್ಯಾನಿಟರಿ ಸೂಪರ್‌ವೈಸರ್, ಯುಜಿಡಿ ಸಹಾಯಕರು ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕೆಂದು ಒತ್ತಾಯಿಸಿದರು.
ದಿನಗೂಲಿ ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರನ್ನು ಕಾಯಂ ಮಾಡಬೇಕು. ಎಲ್ಲ ನೌಕರರಿಗೆ ಎಸ್‌ಎಫ್‌ಸಿ ಮುಕ್ತ ನಿಧಿಯಿಂದ ವೇತನ ನೀಡಬೇಕು ಎಂಬ ವಿವಿಧ ಬೇಡಿಕೆಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದರೆ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿಯಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪುರಸಭೆ ಅಧ್ಯಕ್ಷೆ ಕೋಕಿಲಾ ಅರುಣ್ ಕುಮಾರ್ ಮಾತನಾಡಿ, ಕಳೆದೆರಡು ದಿನಗಳಿಂದ ಪಟ್ಟಣಾದ್ಯಂತ ಪೌರ ನೌಕರರ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಉಂಟಾಗಿದೆ. ಹೀಗಾಗಿ, ರಾಜ್ಯ ಸರ್ಕಾರವು ಪೌರ ನೌಕರರ ಬೇಡಿಕೆಗಳನ್ನು ಆದಷ್ಟು ಬೇಗ ಈಡೇರಿಸಬೇಕು ಹಾಗೂ ಈ ಸಂಬಂಧ ನಾನು ಕೂಡ ಸರ್ಕಾರದ ಗಮನಕ್ಕೆ ತರುತ್ತೇನೆಂದು ಭರವಸೆ ನೀಡಿ, ಪೌರ ನೌಕರರ ಮುಷ್ಕರಕ್ಕೆ ಬೆಂಬಲ ನೀಡಿದರು.
ಪ್ರತಿಭಟನೆಯಲ್ಲಿ ಸಂಘದ ಗೌರವಾಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ಶಿವಣ್ಣ, ಕಾರ್ಯದರ್ಶಿ ರಘು, ಜಿಲ್ಲಾ ಸಂಚಾಲಕ ಪುರುಷೋತ್ತಮ ಹಾಗೂ ಕುಮಾರ್, ಬಾಬು, ಪುಟ್ಟಸ್ವಾಮಿ, ಶ್ರೀಧರ್ ಮತ್ತಿತರರು ಇದ್ದರು.