ಜಿಲ್ಲೆ

ಡಯಾಲಿಸಿಸ್ ಘಟಕ ಸಿಬ್ಬಂದಿ ಸಂಬಳಕ್ಕಾಗಿ ಬೂಟ್ ಪಾಲಿಶ್ ಮಾಡಿ ಕರವೇ ಕಾರ್ಯಕರ್ತರ ಪ್ರತಿಭಟನೆ

ಗೋಪಾಲಕೃಷ್ಣ ಪಾದೂರ್

ಉಡುಪಿ: ಅಜ್ಜರಕಾಡು ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಘಟಕ ಸಿಬ್ಬಂದಿ ಕಳೆದ ನಾಲ್ಕು ತಿಂಗಳಿಂದ ಸಂಬಳವಿಲ್ಲದೆ ಸಂಕಷ್ಟದಲ್ಲಿದ್ದು,  ಈ ಬಗ್ಗೆ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲಾಸ್ಪತ್ರೆ ಮುಂಭಾಗ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೂಟ್ ಪಾಲಿಷ್ ಮಾಡಿ ಹಣ ಸಂಗ್ರಹಿಸುವ ಮೂಲಕ ವಿಶಿಷ್ಟವಾಗಿ ಪ್ರತಿಭಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಆನ್ಸರ್ ಅಹಮದ್, ನಿರ್ವಹಣೆ ಗುತ್ತಿಗೆ ಪಡೆದ ಬಿ ಆರ್ ಎಸ್ ಸಂಸ್ಥೆ ಒಪ್ಪಂದದಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ರಾಜ್ಯದ 122 ಡಯಾಲಿಸಿಸ್ ಘಟಕ ಅತಂತ್ರ ಸ್ಥಿತಿಯಲ್ಲಿದ್ದು, ಜಿಲ್ಲಾಸ್ಪತ್ರೆ ಸಿಬ್ಬಂದಿಗೆ ಕಳೆದ ನಾಲ್ಕು ತಿಂಗಳಿಂದ ಸಂಬಳವಾಗಿಲ್ಲ. ಜೊತೆಗೆ ರಾಸಾಯನಿಕ ಹಾಗೂ ಫಿಲ್ಟರ್ ಗಳ ಕೊರತೆ ಉಂಟಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಒಂದು ಹಾಗೂ ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿ ಎರಡು ಡಯಾಲಿಸಿಸ್ ಯಂತ್ರಗಳು ಹಾಳಾಗಿವೆ. ಇದರ ದುರಸ್ತಿಗೆ ಸರ್ಕಾರ ಅನುದಾನ ನೀಡಿಲ್ಲ ಎಂದು ಆರೋಪಿಸಿದರು.

ಯುವಶಕ್ತಿ ಕರ್ನಾಟಕ ರಾಜ್ಯ ಅಧ್ಯಕ್ಷ ಪ್ರಮೋದ್ ಉಚ್ಚಿಲ ಉಪಸ್ಥಿತರಿದ್ದರು.