ಜಿಲ್ಲೆ

ಜು.೯ ರಂದು ಪ್ರತಿಭಟನೆ

ಆದರ್ಶ್. ಎಂ.ಕೆ.

ಮಡಿಕೇರಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಗ್ರಾ.ಪಂ ನೌಕರರ ಸಂಘ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳ ವತಿಯಿಂದ ಜು.೯ ರಂದು ವಿರಾಜಪೇಟೆ ಮತ್ತು ಕುಶಾಲನಗರ ತಹಶೀಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯ್ತಿ ನೌಕರರ ಸಂಘದ ಕೊಡಗು ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾರ್ಪೋರೇಟ್ ಸಂಸ್ಥೆಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ರೂಪಿಸಿರುವ ಕಾರ್ಮಿಕ ವಿರೋಧಿ ೪ ಸಂಹಿತೆಗಳನ್ನು ರದ್ದು ಪಡಿಸಬೇಕೆಂದು ಒತ್ತಾಯಿಸಿ ಮತ್ತು ಕೆಲಸದ ಅವಧಿಯನ್ನು ೧೨ ಗಂಟೆಗೆ ವಿಸ್ತರಣೆ ಮಾಡಿರುವ ಕ್ರಮವನ್ನು ವಿರೋಧಿಸಿ ಬೆಳಿಗ್ಗೆ ೧೦.೩೦ ಗಂಟೆಗೆ ಪ್ರತಿಭಟನೆ ನಡೆಸಲಾಗುವುದು. ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಕಾರ್ಮಿಕ ಸಂಘಟನೆಯಲ್ಲಿ ಸಂಯೋಜನೆಗೊಂಡಿರುವ ಎಲ್ಲಾ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಲೊಳ್ಳಲಿವೆ ಎಂದು ಹೇಳಿದ್ದಾರೆ.

ದೇಶದಲ್ಲಿ ಸುಮಾರು ೫೦ ಕೋಟಿಯಷ್ಟು ದುಡಿಯುವ ವರ್ಗವಿದೆ. ಕಾರ್ಮಿಕರ ಹೋರಾಟದ ಫಲವಾಗಿ ಕೆಲಸದ ಸಮಯ ೮ ಗಂಟೆ ಎಂದು ನಿಗಧಿಯಾಗಿತ್ತು. ಆದರೆ ಕೇಂದ್ರ ಸರ್ಕಾರ ಕಾರ್ಪೋರೇಟ್ ಸಂಸ್ಥೆಗಳಿಗೆ ಲಾಭ ಮಾಡಿಕೊಡಲು ೧೨ ಗಂಟೆ ದುಡಿಯಬೇಕು ಎಂದು ಹೇಳುತ್ತಿದೆ. ಇದು ಕಾರ್ಮಿಕರನ್ನು ಜೀತದಾಳುಗಳಂತೆ ದುಡಿಸಿಕೊಳ್ಳುವ ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಆರೋಪಿಸಿದ್ದಾರೆ.