ನವನಗರದಲ್ಲಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ, ಪುನರ್ನಿರ್ಮಾಣ ಹಾಗೂ ಭೂಸ್ವಾಧೀನ ಕಚೇರಿಗೆ ಭೇಟಿ ನೀಡಿದ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯಸಚೇತಕ ಎನ್. ರವಿಕುಮಾರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ವಿಪ ಸದಸ್ಯ ಹಣಮಂತ ನಿರಾಣಿ, ಆರ್ ಆ್ಯಂಡ್ ಆರ್ ವ್ಯವಸ್ಥಾಪಕ ರಮೇಶ ಕಳಸದ, ಮುಖಂಡರಾದ ಬಸವರಾಜ ಯಂಕಂಚಿ, ಭಾಸ್ಕರ ಮನಗೂಳಿ ಇತರರು ಇದ್ದರು. 
ಜಿಲ್ಲೆ

ಕೃಷ್ಣಾ ಮೇಲ್ದಂಡೆ ಯೋಜನೆಗೆ ಅನುದಾನ ಒದಗಿಸಿ

ದತ್ತಾತ್ರೇಯ ಪಿ ಕುಲಕರ್ಣಿ

ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಬಾಧಿತ ರೈತರ ಜಮೀನಿಗೆ ಹಾಗೂ ಅವರಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಶೀಘ್ರಗತಿಯಲ್ಲಿ ತಲುಪಿಸಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ ಅಧಿಕಾರಿಗಳಿಗೆ ಹೇಳಿದರು.

ನವನಗರದಲ್ಲಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ, ಪುನರ್ನಿರ್ಮಾಣ ಹಾಗೂ ಭೂಸ್ವಾಧೀನ ಕಚೇರಿಗೆ ಶುಕ್ರವಾರ ಭೇಟಿ ನೀಡಿ ಕೃಷ್ಣ ಮೇಲ್ದಂಡೆ ಯೋಜನೆ ಕುರಿತು ಚರ್ಚೆ ನಡೆಸಿ ರೈತರಿಗೆ ಎಲ್ಲ ಸೌಲಭ್ಯಗಳನ್ನು ಒದಗಿಸುವಂತೆ ತಿಳಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆ ಸಂತ್ರಸ್ತರ ಕಷ್ಟಗಳನ್ನು ಸರ್ಕಾರ ಅರಿತುಕೊಳ್ಳಬೇಕು. ಯೋಜನೆಗೆ ಬೇಕಾದ ಹಣ ತ್ವರಿತಗತಿಯಲ್ಲಿ ಬಿಡುಗಡೆಗೊಳಿಸಬೇಕು. ಸಿಬ್ಬಂದಿ ಕೊರತೆ ನೀಗಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು. ಮೂರನೇ ಹಂತದ ಕಾಮಗಾರಿಗೆ 51 ಸಾವಿರ ಕೋಟಿ ರೂ. ಅನುದಾನ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ರೈತರ ಕಷ್ಟಕ್ಕೆ ಸ್ಪಂದಿಸಬೇಕಿದೆ ಎಂದು ಹೇಳಿದರು.

ವಿಪ ಸದಸ್ಯ ಹಣಮಂತ ನಿರಾಣಿ ಮಾತನಾಡಿ, ಅನೇಕ ಗ್ರಾಮಗಳಲ್ಲಿ ರೈತರ ಪರಿಸ್ಥಿತಿ ಹದಗೆಟ್ಟು ಹೋಗಿದೆ. ಸಾವಿರಾರು ಜನರಿಗೆ ಇನ್ನೂ ಪರಿಹಾರದ ಹಣ ಪಾವತಿಯಾಗಿಲ್ಲ ಎಂದರು.

ಆರ್ ಆ್ಯಂಡ್ ಆರ್ ವ್ಯವಸ್ಥಾಪಕ ರಮೇಶ ಕಳಸದ, ಮುಖಂಡರಾದ ಬಸವರಾಜ ಯಂಕಂಚಿ, ಭಾಸ್ಕರ ಮನಗೂಳಿ ಇತರರು ಇದ್ದರು.