ರಾಯಚೂರು: ವಿದ್ಯಾರ್ಥಿಗಳಿಗೆ ಸಾಹಿತ್ಯದ ಜತೆ ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗೆ ಅನುಕೂಲವಾಗುವ ಪುಸ್ತಕಗಳನ್ನು ಗ್ರಂಥಾಲಯದಲ್ಲಿಡಬೇಕು ಎಂದು ಜಿಲ್ಲಾಧಿಕಾರಿ ಕೆ.ನಿತೀಶ್ ಹೇಳಿದರು.
ಇದನ್ನೂ ಓದಿ:ಗೂಗಲ್ ಬದಲು ಗ್ರಂಥಾಲಯ ಅವಲಂಬನೆ ಅಗತ್ಯ
ನಗರದ ಸಾರ್ವಜನಿಕ ಗ್ರಂಥಾಲಯಕ್ಕೆ ಶನಿವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಕುಡಿವ ನೀರು ಸೇರಿ ಅಗತ್ಯ ಸೌಕರ್ಯ ಒದಗಿಸಲು ಕ್ರಮ ವಹಿಸಬೇಕು. ತಕ್ಷಣ ಪುಸ್ತಕಗಳು ಲಭ್ಯವಾಗುವಂತೆ ವಿಷಯವಾರು ಪುಸ್ತಕಗಳನ್ನು ಅಚ್ಚುಕಟ್ಟಾಗಿ ಜೋಡಿಸಬೇಕು. ಹೆಚ್ಚಿನ ಪ್ರಮಾಣದಲ್ಲಿ ಗಾಳಿ ಬೆಳಕು ಇರುವಂತೆ ನೋಡಿಕೊಳ್ಳಬೇಕು ಎಂದು ಗ್ರಂಥಾಲಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚಿಸಿದರು.
ಗ್ರಂಥಾಲಯಕ್ಕೆ ನಿತ್ಯ ನೂರಾರು ವಿದ್ಯಾರ್ಥಿಗಳು ಬರುತ್ತಾರೆ. ಹೀಗಾಗಿ ಗ್ರಂಥಾಲಯದ ಮೇಲೆ ಹೊಸ ಸಿಂಟ್ಯಾಕ್ಸ್ ಅಳವಡಿಸಿ ಶುದ್ಧ ಕುಡಿವ ನೀರು ಪೂರೈಸಬೇಕು. ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಗೃಹ ನಿರ್ಮಿಸಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದರು. ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ, ಸಹಾಯಕ ಆಯುಕ್ತ ಗಜಾನನ ಬಾಳೆ, ಮುಖ್ಯ ಗ್ರಂಥಾಲಯಾಧಿಕಾರಿ ನಿರ್ಮಲಾ, ಗ್ರಂಥಾ ಸಹವರ್ತಿ ಪಾಂಡುರಂಗ, ಪ್ರಮುಖರಾದ ರಾಘವೇಂದ್ರ, ಮರಿಯಪ್ಪ ಇತರರಿದ್ದರು.