ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಕ್ಷೇತ್ರದ ಶಾಲೆಗಳ ಅಭಿವೃದ್ಧಿಗೆ ಅನುದಾನ ಮತ್ತು ಶಿಕ್ಷಕರ ನೇಮಕ ಮಾಡುವಂತೆ ಸದನದಲ್ಲಿ ಮನವಿ ಮಾಡಿದರು 
ಜಿಲ್ಲೆ

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿ

ಗುಂಡ್ಲುಪೇಟೆ: ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಗಳ ದುರಸ್ತಿ ಮತ್ತು ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನ ನೀಡುವಂತೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದಾರೆ.

ಮಂಗಳವಾರ ವಿಧಾನಸಭೆ ಅಧಿವೇಶನದಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿ, ಸದ್ಯ ಸರ್ಕಾರ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 2.72 ಕೋಟಿ ರೂ. ಅನುದಾನ ನೀಡಿದೆ. ಆದರೆ ಕ್ಷೇತ್ರ ವ್ಯಾಪ್ತಿಯಲ್ಲಿ ಬಹಳಷ್ಟು ಶಾಲೆಗಳು ದುರಸ್ತಿಯಲ್ಲಿದ್ದು ಮಕ್ಕಳು ಶಾಲಾ ಬಯಲು ಮತ್ತು ಆವರಣದಲ್ಲಿ ಕುಳಿತು ಪಾಠ ಕೇಳುವಂತಾಗಿದೆ. ಅಲ್ಲದೆ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಹೆಚ್ಚಾಗಿದ್ದು ಅತಿಥಿ ಶಿಕ್ಷಕರನ್ನು ಅವಲಂಬಿಸುವಂತಾಗಿದೆ. ಆದ್ದರಿಂದ ಸರ್ಕಾರಿ ಶಾಲೆಗಳ ದುರಸ್ತಿ, ಅಭಿವೃದ್ಧಿಗೆ ಇನ್ನೂ ಹೆಚ್ಚಿನ ವಿಶೇಷ ಅನುದಾನ ನೀಡಬೇಕು, ಶಿಕ್ಷಕರ ನೇಮಕಾತಿ ಮಾಡಿಕೊಳ್ಳಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಮಾಡಿದರು.

ಇದಕ್ಕೆ ಸಚಿವ ಮಧು ಬಂಗಾರಪ್ಪ ಉತ್ತರಿಸಿ ಈಗಾಗಲೇ ನೀಡಿರುವ ಅನುದಾನ ಮಂಜೂರಾಗಿದೆ. ಮುಂದಿನ ದಿನಗಳಲ್ಲಿ ಪರಿಶೀಲಿಸಿ ಮತ್ತಷ್ಟು ಅನುದಾನ ನೀಡಲಾಗುವುದಾಗಿ ಮತ್ತು ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.