ಹಗರಿಬೊಮ್ಮನಹಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆಗಳ ಹೊರಗುತ್ತಿಗೆ ನೌಕರರ ಸಂಘದ ತಾಲೂಕು ಘಟಕ ಸೋಮವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.
ಸಂಘದ ಜಿಲ್ಲಾ ಸಂಚಾಲಕ ಕೊಟಿಗಿ ಮಲ್ಲಿಕಾರ್ಜುನ ಮಾತನಾಡಿ, ಕಳೆದ 15-20 ವರ್ಷಗಳಿಂದ ಕಡಿಮೆ ಸಂಬಳಕ್ಕೆ ಸರ್ಕಾರಿ ಹಾಸ್ಟೆಲ್ ಹಾಗೂ ವಸತಿ ಶಾಲೆಗಳಲ್ಲಿ ಹೊರಗುತ್ತಿಗೆ ನೌಕರರಾಗಿ ಅಡುಗೆಗಾರರಿಂದ ಡಿ.ಗ್ರೂಫ್ ನೌಕರರವರೆಗೆ ಸೇವೆ ಸಲ್ಲಿಸುತ್ತಿದ್ದು, ಯಾವುದೇ ಭದ್ರತೆ ಇಲ್ಲವಾಗಿದೆ. ಆದ್ದರಿಂದ ಕನಿಷ್ಠ ವೇತನ ಹಾಗೂ ಸೇವಾ ಭದ್ರತೆ ಸೇರಿ ವಿವಿಧ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಕನ್ನಡ ವಿಶ್ವವಿದ್ಯಾಲಯ ಅನೇಕ ಸಮಸ್ಯೆಗಳಿಂದ ಕೂಡಿದೆ. ಕನ್ನಡ ವಿಶ್ವವಿದ್ಯಾಲಯದ ದಿನಗೂಲಿ ನೌಕರರು, ಹೊರಗುತ್ತಿಗೆ ಸಿಬ್ಬಂದಿ ಆರ್ಥಿಕ ಸಂಕಷ್ಟ ದೂರಮಾಡಲು ಸರ್ಕಾರ 10 ಕೋಟಿ ರೂ. ಅನುದಾನ ನೀಡಬೇಕು ಎಂದು ಒತ್ತಾಯಿಸಿದರು.
ಉಪ ತಹಸೀಲ್ದಾರ್ ಶಿವಕುಮಾರ್‌ಗೌಡಗೆ ಮನವಿ ಸಲ್ಲಿಸಿದರು. ಪ್ರಮುಖರಾದ ದುರುಗಪ್ಪ, ನಾಗರಾಜ್, ವಸಂತ, ಮೂರ್ತೆಪ್ಪ, ವೆಂಕಟೇಶ, ರಾಮಕ್ಕ, ದುರುಗಮ್ಮ, ರಿಜ್ವಾನ್, ಶೀಲಮ್ಮ, ಲಕ್ಷ್ಮೀ, ರುದ್ರಮ್ಮ ಇತರರಿದ್ದರು.