-
ಬೆಳಗಾವಿ: ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ ಇಬ್ಬರು ಪಿಐಗಳನ್ನು ಶುಕ್ರವಾರ ಅಮಾನತು ಮಾಡಲಾಗಿದೆ. ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಠಾಣೆಯ ಪಿಐ ವಿಜಯಕುಮಾರ ಶಿನ್ನೂರ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ಆದೇಶ ಹೊರಡಿಸಿದ್ದಾರೆ. ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಸರ್ಕಾರ ಮತ್ತು ಪೊಲೀಸ್ ಇಲಾಖೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡರೆ, ಮತ್ತೊಂದು ಕಡೆ ವಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಿತ್ತು. ವಿಪಕ್ಷ ನಾಯಕ ಆರ್. ಅಶೋಕ ನೇತತ್ವದ ತಂಡ ಕಾಕತಿ ಪೊಲೀಸ್ ಠಾಣೆಗೆ ತೆರಳಿ ಅಸಮಾಧಾನ ವ್ಯಕ್ತಪಡಿಸಿತ್ತು. ಸೆಪ್ಟೆಂಬರ್‌ನಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿತ್ತೂರು ಪೊಲೀಸ್ ಠಾಣೆಯ ಪಿಐ ಎಂ.ವಿ.ಹೊಸಪೇಟೆ ಅವರನ್ನು ಅಮಾನತು ಮಾಡಿರುವುದಾಗಿ ಎಸ್ಪಿ ಡಾ. ಭೀಮಾಶಂಕರ ಗುಳೇದ ತಿಳಿಸಿದ್ದಾರೆ.