ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಜು.೨೪ ರಂದು ವಿರಾಜಪೇಟೆ ಗಡಿಯಾರ ಕಂಬದ ಬಳಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬುಧವಾರ ಬೆಳಿಗ್ಗೆ ೧೦.೩೦ ಗಂಟೆಗೆ ಮಾನವ ಸರಪಳಿ ನಿರ್ಮಿಸಿ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ವಿರೋಧಿಸಿ ಹಕ್ಕೊತ್ತಾಯ ಮಂಡಿಸಲಾಗುವುದು. ಕೊಡವ ಲ್ಯಾಂಡ್‌ನ ಸಂರಕ್ಷಣೆಗಾಗಿ ಸರ್ವ ಕೊಡವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಆದಿಮಸಂಜಾತ ಕೊಡವರ ಹಕ್ಕುಗಳನ್ನು ರಕ್ಷಿಸಲು ಕೊಡವ ಲ್ಯಾಂಡ್ ಸ್ವಯಂ ನಿರ್ಣಯದ ಭೂರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ ಎಸ್‌ಟಿ ಟ್ಯಾಗ್ ನೀಡುವುದು ಅಗತ್ಯವಾಗಿದೆ. ಇದಕ್ಕಾಗಿ ವ್ಯಾಪಕ ಜನಜಾಗೃತಿ ಮತ್ತು ಜಿಲ್ಲೆಯಾದ್ಯಂತ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.