ಜಿಲ್ಲೆ

ಆ.೨೭ರಂದು ಜನಜಾಗೃತಿ ಕಾರ್ಯಕ್ರಮ

ಆದರ್ಶ್. ಎಂ.ಕೆ.

ಮಡಿಕೇರಿ: ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್‌ಟಿ ವರ್ಗೀಕರಣ ಸೇರಿದಂತೆ ೨೦೨೬ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ(ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್‌ನ್ನು ಸೇರಿಸಬೇಕು. ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಆ.೨೭ರಂದು ವಿರಾಜಪೇಟೆಯಲ್ಲಿ ೧೧ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬುಧವಾರ ಬೆಳಿಗ್ಗೆ ೧೦.೩೦ ಗಂಟೆಗೆ ವಿರಾಜಪೇಟೆಯ ಗಡಿಯಾರ ಕಂಬದ ಬಳಿ ಮಾನವ ಸರಪಳಿ ನಿರ್ಮಿಸಿ ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು. ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ವಿವರಿಸಲಾಗುವುದು ಎಂದು ಹೇಳಿದ್ದಾರೆ.

ಕೊಡವ ಸಮುದಾಯದ ಹಕ್ಕೊತ್ತಾಯಗಳಿಗೆ ಮತ್ತು ಜಾಗೃತಿ ಮೂಡಿಸುವುದಕ್ಕಾಗಿ ಮಾನವ ಸರಪಳಿ ಕಾರ್ಯಕ್ರಮ ವಿರಾಜಪೇಟೆಯಲ್ಲಿ ಶಾಂತಿಯುತವಾಗಿ ನಡೆಯಲಿದೆ. ಕದನೂರು, ಚೆಂಬೆಬೆಳ್ಳೂರು, ಬಿಟ್ಟಂಗಾಲ, ಬೇಟೋಳಿ, ಕಡಂಗಮರೂರು, ಮಗ್ಗುಲ, ಐಮಂಗಲ ಭಾಗದ ಕೊಡವ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಎನ್.ಯು.ನಾಚಪ್ಪ ಮನವಿ ಮಾಡಿದ್ದಾರೆ.