ಮಡಿಕೇರಿ: ರಾಷ್ಟ್ರೀಯ ಜನಗಣತಿಯ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್‌ನ್ನು ಸೇರಿಸಬೇಕು. ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇ? ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾ?ನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜೂ.೨೩ ರಂದು ಪೊನ್ನಂಪೇಟೆಯಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸೋಮವಾರ ಬೆಳಿಗ್ಗೆ ೧೦.೩೦ ಗಂಟೆಗೆ ಪೊನ್ನಂಪೇಟೆಯಲ್ಲಿ ಮಾನವ ಸರಪಳಿ ನಿರ್ಮಿಸಿ ವಿವಿಧ ಬೇಡಿಕೆಗಳ ಕುರಿತು ಹಕ್ಕೊತ್ತಾಯ ಮಂಡಿಸಲಾಗುವುದು. ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ವಿವರಿಸಲಾಗುವುದು ಎಂದು ತಿಳಿಸಿದ್ದಾರೆ.
೨೦೨೫-೨೬ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಸಂವಿಧಾನದಡಿ ಕೊಡವರನ್ನು ಎಸ್‌ಟಿ ಪಟ್ಟಿಯಲ್ಲಿ ಸೇರಿಸಬೇಕು. ವಿಶ್ವರಾಷ್ಟ್ರ ಸಂಸ್ಥೆಯ ಅಂತರಾಷ್ಟ್ರೀಯ ಕಾನೂನಿನಡಿ ಆದಿಮಸಂಜಾತ ಕೊಡವ ಸಮುದಾಯವನ್ನು ಸಂರಕ್ಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು. ಮಾನವ ಸರಪಳಿ ಕಾರ್ಯಕ್ರಮವು ಕೊಡವ ಸಮುದಾಯದ ಹಕ್ಕೊತ್ತಾಯಗಳಿಗೆ ಮತ್ತು ಜಾಗೃತಿ ಮೂಡಿಸುವುದಕ್ಕಾಗಿ ಶಾಂತಿಯುತವಾಗಿ ನಡೆಯಲಿದ್ದು, ಪೊನ್ನಂಪೇಟೆ ಭಾಗದ ಕೊಡವ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಎನ್.ಯು.ನಾಚಪ್ಪ ಮನವಿ ಮಾಡಿದ್ದಾರೆ.