ಮಡಿಕೇರಿ: ರಾಷ್ಟ್ರೀಯ ಜನಗಣತಿಯ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು, ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಮೇ೨೬ ರಂದು ಟಿ.ಶೆಟ್ಟಿಗೇರಿಯಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸೋಮವಾರ ಬೆಳಿಗ್ಗೆ ೧೦.೩೦ ಗಂಟೆಗೆ ಟಿ.ಶೆಟ್ಟಿಗೇರಿ ಜಂಕ್ಷನ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ವಿವಿಧ ಬೇಡಿಕೆಗಳ ಕುರಿತು ಹಕ್ಕೊತ್ತಾಯ ಮಂಡಿಸಲಾಗುವುದು. ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ವಿವರಿಸಲಾಗುವುದು ಎಂದು ಹೇಳಿದ್ದಾರೆ.
೨೦೨೫-೨೬ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಸಂವಿಧಾನದಡಿ ಕೊಡವರನ್ನು ಎಸ್‌ಟಿ ಪಟ್ಟಿಯಲ್ಲಿ ಸೇರಿಸಬೇಕು. ವಿಶ್ವರಾಷ್ಟ್ರ ಸಂಸ್ಥೆಯ ಅಂತರಾಷ್ಟ್ರೀಯ ಕಾನೂನಿನಡಿ ಆದಿಮಸಂಜಾತ ಕೊಡವ ಸಮುದಾಯವನ್ನು ಸಂರಕ್ಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದ್ದಾರೆ.
ಮಾನವ ಸರಪಳಿ ಕಾರ್ಯಕ್ರಮ ಕೊಡವ ಸಮುದಾಯದ ಹಕ್ಕೊತ್ತಾಯಗಳಿಗೆ ಮತ್ತು ಜಾಗೃತಿ ಮೂಡಿಸುವುಕ್ಕಾಗಿ ಶಾಂತಿಯುತವಾಗಿ ನಡೆಯಲಿದ್ದು, ಟಿ.ಶೆಟ್ಟಿಗೇರಿ ಭಾಗದ ಕೊಡವ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಎನ್.ಯು.ನಾಚಪ್ಪ ಮನವಿ ಮಾಡಿದ್ದಾರೆ.