ಮಡಿಕೇರಿ: ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಅ.೨೧ ರಂದು ಉಮ್ಮತ್ ನಾಡಿನ ಅಮ್ಮತ್ತಿಯಲ್ಲಿ ೧೬ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಂಗಳವಾರ ಬೆಳಿಗ್ಗೆ ೧೦.೩೦ ಗಂಟೆಗೆ ಅಮ್ಮತ್ತಿಯಲ್ಲಿ ಶಾಂತಿಯುತವಾಗಿ ಮಾನವ ಸರಪಳಿ ನಿರ್ಮಿಸಿ ಕೊಡವ ಲ್ಯಾಂಡ್ ಸೇರಿದಂತೆ ಕೊಡವರ ಎಲ್ಲಾ ಸಂವಿಧಾನಿಕ ಹಕ್ಕೊತ್ತಾಯಗಳ ಕುರಿತು ಹಕ್ಕೊತ್ತಾಯ ಮಂಡಿಸಲಾಗುವುದು. ೨೦೨೬ ಅಕ್ಟೋಬರ್ ನಿಂದ ಕೇಂದ್ರ ಸರಕಾರದ ಮೂಲಕ ನಡೆಯಲಿರುವ ಭಾರತ ದೇಶದ ೧೬ನೇ ರಾಷ್ಟ್ರೀಯ ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಅಳವಡಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳ ಮಹತ್ವದ ಕುರಿತಾಗಿ ವಿವರಿಸಲಾಗುವುದು ಎಂದು ಹೇಳಿದ್ದಾರೆ.
೨೦೨೬-೨೭ರ ೧೬ನೇ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ಅಳವಡಿಸಬೇಕು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಸಂವಿಧಾನದಡಿ ಕೊಡವರನ್ನು ಎಸ್‌ಟಿ ಪಟ್ಟಿಯಲ್ಲಿ ವರ್ಗೀಕರಿಸಬೇಕು. ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ವಿಶೇಷ ರಾಜಕೀಯ ಸ್ಥಾನಮಾನ ಕಲ್ಪಿಸಬೇಕು. ಅಲ್ಲದೆ ಜಾತಿ ಜನಗಣತಿಯ ಕಾಲಂಗಳಲ್ಲಿ ಕೊಡವರು (ಕೊಡವ) ಎಂದು ನಮೂದಿಸುವಂತೆ ಜನಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದ್ದಾರೆ.
ಕೊಡವ ಸಮುದಾಯದ ಹಕ್ಕೊತ್ತಾಯಗಳಿಗೆ ಮತ್ತು ಜಾಗೃತಿ ಮೂಡಿಸುವುದಕ್ಕಾಗಿ ಮಾನವ ಸರಪಳಿ ಕಾರ್ಯಕ್ರಮವು ಶಾಂತಿಯುತವಾಗಿ ನಡೆಯಲಿದ್ದು, ಅಮ್ಮತ್ತಿ ಭಾಗದ ಕೊಡವ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಎನ್.ಯು.ನಾಚಪ್ಪ ಮನವಿ ಮಾಡಿದ್ದಾರೆ.