ಜಿಲ್ಲೆ

ಸೆ.೧೮ ರಂದು ಜನಜಾಗೃತಿ ಕಾರ್ಯಕ್ರಮ

ಆದರ್ಶ್. ಎಂ.ಕೆ.

ಮಡಿಕೇರಿ: ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್‌ಟಿ ವರ್ಗೀಕರಣವು ೨೦೨೬ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್‌ನ್ನು ಸೇರಿಸಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಸೆ.೧೮ ರಂದು ಮೂರ್ನಾಡಿನಲ್ಲಿ ೧೩ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಗುರುವಾರ ಬೆಳಿಗ್ಗೆ ೧೦.೩೦ ಗಂಟೆಗೆ ಮೂರ್ನಾಡು ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ನಿರ್ಮಿಸಿ ವಿವಿಧ ಸಂವಿಧಾನಿಕ ಹಕ್ಕೊತ್ತಾಯಗಳ ಕುರಿತು ಹಕ್ಕೊತ್ತಾಯ ಮಂಡಿಸಲಾಗುವುದು. ೨೦೨೫ ಸೆ.೨೨ ರಿಂದ ಅ.೭ ರವರೆಗೆ ಒಟ್ಟು ೧೫ ದಿನಗಳ ಕಾಲ ನಡೆಯಲಿರುವ ರಾಜ್ಯ ಸರ್ಕಾರದ ಜಾತಿವಾರು ಗಣತಿಯ ಜಾತಿ-ಭಾಷೆ-ಧರ್ಮ ಕಾಲಂನಲ್ಲಿ ಕೊಡವ ಎಂದೇ ಬರೆಸಬೇಕೆಂಬ ಕರೆಯೂ ಸೇರಿದಂತೆ ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಲಾಗುವುದು ಎಂದು ತಿಳಿಸಿದ್ದಾರೆ.

೨೦೨೫-೨೬ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಸಂವಿಧಾನದಡಿ ಕೊಡವರನ್ನು ಎಸ್‌ಟಿ ಪಟ್ಟಿಯಲ್ಲಿ ಸೇರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿ ಅವರು, ಜಾಗೃತಿ ಕಾರ್ಯಕ್ರಮಕ್ಕೆ ಕೊಡವ ಬಂಧುಗಳು ಹೆಚ್ಚಿನ ಸಂಖ್ಯೆಂಲ್ಲಿ ಪಾಲ್ಗೊಳ್ಳುವಂತೆ ಎನ್.ಯು.ನಾಚಪ್ಪ ಮನವಿ ಮಾಡಿದ್ದಾರೆ.