ನಂಜನಗೂಡು: ಭೀಮಾ ಕೋರೆಂಗಾವ್ ವಿಜಯೋತ್ಸವ ಅಂಗವಾಗಿ ದಲಿತ ಸಂಘಟನೆಗಳ ಒಕ್ಕೂಟ ವತಿಯಿಂದ ಪಟ್ಟಣದ ಅಂಬೇಡ್ಕರ್ ಸಮುದಾಯ ಭವನ ಆವರಣದಲ್ಲಿ ಜ.12ರಂದು ಜನಜಾಗೃತಿ ಸಮಾವೇಶ ಹಮ್ಮಿಕೊಂಡಿದೆ.
ಈ ಸಂಬಂಧ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಗುರುವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಮಲ್ಲೇಶ್ ಚುಂಚನಹಳ್ಳಿ ಮಾತನಾಡಿ, ಅಂಬೇಡ್ಕರ್ ಅವರ ವಾಣಿಯಂತೆ ಕೋರೆಂಗಾವ್ ಸಂಭ್ರಮಾಚರಣೆಯನ್ನು ಭಾರತದ ಇತಿಹಾಸದಲ್ಲಿ ಅಳಿಸಲಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದರು.
ದಲಿತ ಸಂಘಟನೆಗಳ ಒಕ್ಕೂಟ 6 ವರ್ಷಗಳಿಂದ ಕೋರೆಂಗಾವ್ ವಿಜಯೋತ್ಸವ ಸಂಭ್ರಮಾಚರಣೆ ಸಂಬಂಧ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಸಮಾವೇಶ ಮಾಡುತ್ತಿದೆ. ನಗರದ ಜೂನಿಯರ್ ಕಾಲೇಜು ಮೈದಾನದಿಂದ ಮೆರವಣಿಗೆ ಹೊರಟು, ನಗರದ ಪ್ರಮುಖ ಬೀದಿಗಳಲ್ಲಿ ಸಾಗಿಲಿದೆ. ಬಳಿಕ ಅಂಬೇಡ್ಕರ್ ಸಮುದಾಯ ಭವನದ ಆವರಣದಲ್ಲಿ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಅಂಬೇಡ್ಕರ್ ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪೊಲೀಸರಂತೆ ಕೆಲಸ ಮಾಡಬೇಕು: ಸಾವಿರಾರು ಜನರು ಕಾರ್ಯಕ್ರಮಕ್ಕೆ ಆಗಮಿಸುವುದರಿಂದ ಯಾವುದೇ ಅಹಿತಕರ ಘಟನೆಗೆ ಅವಕಾಶ ಮಾಡಿಕೊಡಬಾರದು. ಮೆರವಣಿಗೆ ಶಿಸ್ತಿನಿಂದ ಕೂಡಿರಬೇಕು. ಹಾಗೆಯೇ ಕಾರ್ಯಕ್ರಮವೂ ಶಿಸ್ತುಬದ್ಧವಾಗಿ ನಡೆಯಬೇಕು. ಈ ಹಿನ್ನೆಲೆಯಲ್ಲಿ ಸಂಘಟನೆಯ ಕಾರ್ಯಕರ್ತರು ಪೊಲೀಸರಂತೆ ಸ್ವಯಂಪ್ರೇರಿತರಾಗಿ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಮೆರವಣಿಗೆಗೆ ಉರಿಲಿಂಗಿ ಪೆದ್ದಿ ಮಠದ ಜ್ಣಾನಪ್ರಕಾಶ ಸ್ವಾಮೀಜಿ ಚಾಲನೆ ನೀಡಲಿದ್ದು, ಕಾರ್ಯಕ್ರಮವನ್ನು ಪತ್ರಕರ್ತ ರಮಾಕಾಂತ್ ಉದ್ಘಾಟಿಸಲಿದ್ದಾರೆ. ಪ್ರಗತಿಪರ ಚಿಂತಕಡಾ.ಎಲ್.ಎನ್. ಮುಕುಂದರಾಜ್, ಅಭಿ ನಾಗಭೂಷನ್, ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಗರ್ಲೆ ವಿಜಯ್‌ಕುಮಾರ್ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ದಲಿತ ಸಂಘಟನೆಗಳ ಒಕ್ಕೂಟದ ಉಪಾಧ್ಯಕ್ಷ ಪುಟ್ಟಸ್ವಾಮಿ ದೇವರಸನಹಳ್ಳಿ, ಜಿಲ್ಲಾ ಪ್ರಧಾನ ಸಂಚಾಲಕ ಮಲ್ಲಹಳ್ಳಿ ನಾರಾಯಣ, ಜಿಲ್ಲಾ ಸಂಯೋಜಕ ಕಾರ್ಯ ಬಸವಣ್ಣ, ಅಭಿನಾಗಭೂಷನ್, ತಾಲೂಕು ಸಂಚಾಲಕ ಸುರೇಶ್ ಶಂಕರಪುರ, ಯಶವಂತ್ ಕುಮಾರ್ ಶ್ರೀರಾಮಪುರ, ಜೈಶಂಕರ್ ಕಾರ್ಯ ಇತರರು ಇದ್ದರು.