ಹಳಿಯಾಳ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರ ಜನಪರ ಕಾರ್ಯ ಚಟುವಟಿಕೆ ಹಮ್ಮಿಕೊಳ್ಳುತ್ತಿದ್ದು, ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸರ್ಕಾರದ ಜತೆಗೆ ಸಮುದಾಯದ ಸಹಭಾಗಿತ್ವ ಅತಿ ಮುಖ್ಯವಾಗಿದೆ ಎಂದು ಹಳಿಯಾಳ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ ಮಹಾಲೆ ಅಭಿಪ್ರಾಯಪಟ್ಟರು.
ಪಟ್ಟಣದ ಶಿವಾಜಿ ಪ್ರೌಢಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಾರ್ವಜನಿಕರ ಸಹಭಾಗಿತ್ವ ಅವಶ್ಯ. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಇದಕ್ಕೆ ಖಾಸಗಿ ಸಂಸ್ಥೆಗಳು ಸಹಕರಿಸಬೇಕು ಎಂದು ಕರೆ ನೀಡಿದರು.
ಪುರಸಭೆ ಅಧ್ಯಕ್ಷ ದ್ರೌಪತಿ ಅಗಸರ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿಲಾಸರಾಜ ಪ್ರಸನ್ನ, ಪ್ರಮುಖರಾದ ಸುಬಾನಿ ಹುಬ್ಬಳ್ಳಿ ಇತರರಿದ್ದರು.