ಮಂಡ್ಯ: ಜಿಲ್ಲೆಯಲ್ಲಿ ಜೂ.24 ರಿಂದ ಜು.5ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3 ನಡೆಯಲಿದೆ. ಇದಕ್ಕೆಂದು 1,717 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಸಹಾಯಕಿ ಡಾ.ರೋಹಿಣಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ 7 ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. ನಿಗದಿತ ದಿನದಂದು ಬೆಳಗ್ಗೆ 10.15 ರಿಂದ 1.30 ರವರೆಗೆ ನಡೆಯಲಿದೆ. ಎನ್‌ಎಸ್‌ಕ್ಯೂಎಫ್ ವಿಷಯಾಧಾರಿತ ಪರೀಕ್ಷೆಗಳು 2.15 ರಿಂದ 4.30ರವರೆಗೆ ನಡೆಯುತ್ತದೆ ಎಂದು ಹೇಳಿದರು.
ಪರೀಕ್ಷೆ ನಡೆಯುವ ದಿನದಂದು ಕೇಂದ್ರದ ಸುತ್ತಲೂ 200 ಮೀ ಸುತ್ತಳತೆಯಲ್ಲಿ 144ನೇ ಕಲಂ ಜಾರಿಗೊಳಿಸಬೇಕು. ಕೇಂದ್ರದ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಬೇಕು. ಜಿಲ್ಲಾ ಖಜಾನೆಯಿಂದ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆ ವಿತರಿಸಲು ಮಾರ್ಗಾಧಿಕಾರಿ ತಂಡಕ್ಕೆ ಅಗತ್ಯವಿರುವ ವಾಹನಗಳ ಸೌಕರ್ಯವನ್ನು ಒದಗಿಸುವುದು. ವಿದ್ಯಾರ್ಥಿಗಳ ಹಾಜರಾತಿ ಆನ್‌ಲೈನ್‌ನಲ್ಲಿ ಮಾಡುವುದರಿಂದ ಪರೀಕ್ಷಾ ಸಮಯದಲ್ಲಿ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು ಎಂದು ಸೂಚಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಚೆಲುವಯ್ಯ ಹಾಗೂ ವಿವಿಧ ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು.