ಜಿಲ್ಲೆ

ಪಂಪ್‌ಸೆಟ್‌ಗಳ ಅನಧಿಕೃತ ವಿದ್ಯುತ್ ಸಂಪರ್ಕ ಕಡಿತ

ಅಶೋಕ್ ಕುಮಾರ್ ಎನ್

ಮಸ್ಕಿ: ತುಂಗಭದ್ರಾ ಎಡದಂಡೆ ನಾಲೆಯಿಂದ ಕೃಷಿಗೆ ಅನಧಿಕೃತವಾಗಿ ನೀರು ಪಡೆಯುವುದನ್ನು ತಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. ಇದಕ್ಕೆ ಪೂರಕವಾಗಿ ಅನಧಿಕೃತವಾಗಿ ಅಳವಡಿಸಿದ್ದ ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.

ಮಸ್ಕಿ ಉಪವಿಭಾಗ ವ್ಯಾಪ್ತಿಯ 60 ರಿಂದ 70ನೇ ಮೈಲ್‌ವರೆಗೆ ಕಾರ್ಯಾಚರಣೆ ನಡೆಸಿದ ನೀರಾವರಿ, ಕಂದಾಯ, ಜೆಸ್ಕಾಂ, ಕೃಷಿ, ಪೊಲೀಸ್ ಇಲಾಖೆ ಅಧಿಕಾರಿಗಳು 50 ರಿಂದ 60 ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಪಂಪ್‌ಸೆಟ್‌ಗಳನ್ನು ತೆರವುಗೊಳಿಸಿದ್ದಾರೆ.

ತುಂಗಭದ್ರಾ ಎಡದಂಡೆ ನಾಲೆ ವ್ಯಾಪ್ತಿಯಲ್ಲಿ ಕೃಷಿ ಹಾಗೂ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಿಕೊಳ್ಳುವುದಕ್ಕಾಗಿ ಜಲಾಶಯದಿಂದ ನೀರು ಬಿಡಲಾಗಿದೆ. ಆದರೆ, ನಾಲೆಯ ಮೇಲ್ಭಾಗದಲ್ಲಿ ಅನಧಿಕೃತವಾಗಿ ಪಂಪ್‌ಸೆಟ್‌ಗಳ ಮೂಲಕ ನೀರನ್ನು ಬಳಕೆ ಮಾಡಿಕೊಳ್ಳುತ್ತಿರುವುದರಿಂದ ನಾಲೆಯ ಕೊನೆಯ ಭಾಗಕ್ಕೆ ಸಮರ್ಪಕವಾಗಿ ನೀರು ಹರಿಯುತ್ತಿಲ್ಲ. ಇದರಿಂದಾಗಿ ನಾಲೆಯ ಕೊನೆಯ ಭಾಗದ ರೈತರು ಹಲವಾರು ಬಾರಿ ಸಂಚಾರ ತಡೆದು ಹೋರಾಟ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅನಧಿಕೃತ ಪಂಪ್‌ಸೆಟ್ ತೆರವುಗೊಳಿಸಿದ್ದಾರೆ.