ಸಿಂಧನೂರು: ರಾಜ್ಯದಲ್ಲಿ ರೈತರು ಬೆಳೆದಿರುವ ಜೋಳ ಎಕರೆಗೆ 15 ಕ್ವಿಂಟಾಲ್‌ನಂತೆ ಖರೀದಿಸಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ತಿಳಿಸಿದ್ದಾರೆ.
ಈ ಮೊದಲು ಎಕರೆಗೆ 20 ಕ್ವಿಂ.ನಂತೆ ಗರಿಷ್ಠ 150 ಕ್ವಿಂ. ಖರೀದಿಗೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ಖರೀದಿ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗಿ ರೈತರು ತೊಂದರೆ ಅನುಭವಿಸಿದ್ದರು. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಮ್ಮುಖದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ 2024-25ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಜೋಳ ಖರೀದಿ ಪ್ರಕ್ರಿಯೆಯಲ್ಲಿ ಆಗುವ ಲೋಪದೋಷಗಳನ್ನು ತಡೆಯಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು.
ಕೊನೆಗೆ ರೈತರು ಬೆಳೆದಿರುವ ಎಲ್ಲ ಜೋಳ (ಮುಂಗಾರು-ಹಿಂಗಾರು)ವನ್ನು ಖರೀದಿ ಮಾಡುವುದು, ಎಕರೆಗೆ 15 ಕ್ವಿಂಟಾಲ್‌ನಂತೆ ಗರಿಷ್ಠ 150 ಕ್ವಿಂ. ಖರೀದಿಸಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.