ಜಿಲ್ಲೆ

ಹೊರ ರಾಜ್ಯದಿಂದ ಬರಲು 6092 ಅರ್ಜಿ, ತಾಲೂಕು ಮಟ್ಟದಲ್ಲಿ ಕ್ವಾರಂಟೈನ್‌ಗೆ ವ್ಯವಸ್ಥೆ

Dakshina Kannada

ಮಂಗಳೂರು: ಹೊರರಾಜ್ಯಗಳಿಂದ ದ.ಕ ಜಿಲ್ಲೆಗೆ ಬರುವವರನ್ನು ಕಡ್ಡಾಯವಾಗಿ ಕ್ವಾರಂಟೈನ್‌ಗೆ ಒಳಪಡಿಸುವಂತೆ ಸರ್ಕಾರ ಆದೇಶಿಸಿದೆ. ಈ ನಿಟ್ಟಿನಲ್ಲಿ ಶಾಸಕರು ಆಯಾ ವಿಧಾನಸಭಾ ಕ್ಷೇತ್ರಮಟ್ಟದಲ್ಲಿ ಅಧಿಕಾರಿಗಳ ಸಭೆ ನಡೆಸಿ ಕ್ವಾರಂಟೈನ್‌ಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಮುಂದಾಗಬೇಕು. ಮೇ 13ರಿಂದಲೇ ಆಯಾ ಕ್ಷೇತ್ರದಲ್ಲಿ ಸಭೆ ನಡೆಸುವಂತೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.

ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಸಾಂಸ್ಥಿಕವಾಗಿ ಕ್ವಾರಂಟೈನ್ ಸಿದ್ಧತೆ ಸಭೆಯಲ್ಲಿ ಮಾತನಾಡಿದರು.

ಗರ್ಭಿಣಿಯರು, ಅಂಗವಿಕಲರು ಹಾಗೂ ಅನಾರೋಗ್ಯ ಪೀಡಿತರಿಗೆ ಹೋಂ ಕ್ವಾರಂಟೈನ್ ವ್ಯವಸ್ಥೆ ಕಲ್ಪಿಸುವಂತೆ ಜನಪ್ರತಿನಿಧಿಗಳ ವಿನಂತಿ ಬಗ್ಗೆ ಸರ್ಕಾರದ ಜತೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು. ಆಯಾ ತಾಲೂಕುಗಳಲ್ಲಿ ವ್ಯವಸ್ಥೆ ಬಗ್ಗೆ ತಹಸೀಲ್ದಾರ್, ಆರೋಗ್ಯ ಅಧಿಕಾರಿಗಳು ಶಾಸಕರಿಗೆ ಮಾಹಿತಿ ನೀಡಬೇಕು ಎಂದರು.

ಜಿಲ್ಲೆಯಲ್ಲಿ 3,500 ಕೊಠಡಿಗಳನ್ನು ಕ್ವಾರಂಟೈನ್‌ಗಾಗಿ ಕಾದಿರಿಸಲಾಗಿದೆ. ವಿದೇಶದಿಂದ ಬರುವವರಿಗೆ ಅವರ ಬೇಡಿಕೆಗೆ ಅನುಗುಣವಾದ ಹೋಟೆಲ್ ವ್ಯವಸ್ಥೆ ಮಾಡಲಾಗಿದ್ದು, ಅಲ್ಲೇ ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಸಭೆಗೆ ಮಾಹಿತಿ ನೀಡಿದರು.

ಸಂಸದ ನಳಿನ್‌ಕುಮಾರ್ ಕಟೀಲ್, ಶಾಸಕರಾದ ಡಾ. ವೈ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಹರೀಶ್ ಕುಮಾರ್, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, ಮಂಗಳೂರು ಉಪ ವಿಭಾಗದ ಸಹಾಯಕ ಆಯುಕ್ತ ಮದನ್ ಮೋಹನ್ ಇದ್ದರು.

ಖಾಸಗಿ ಹಾಸ್ಟೆಲ್ ಬಳಸಿ: ಜಿಲ್ಲೆಯ ಖಾಸಗಿ ವೈದ್ಯಕೀಯ, ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್‌ಗಳನ್ನು ಬಳಸಿಕೊಳ್ಳುವಂತೆ ಶಾಸಕ ವೇದವ್ಯಾಸ ಕಾಮತ್ ಸಲಹೆ ನೀಡಿದರು. ಹೊರ ರಾಜ್ಯಗಳಿಂದ ಬರುವವರು ತಮ್ಮ ಮನೆ ಅಥವಾ ಸಂಬಂಧಿಕರ ಮನೆಗಳಲ್ಲಿ ಪ್ರತ್ಯೇಕವಾಗಿ ಕ್ವಾರಂಟೈನ್‌ಗೆ ಒಳಪಡಲು ಇಚ್ಛಿಸಿದರೆ, ಸೂಕ್ತ ಕ್ರಮಗಳೊಂದಿಗೆ ಅವರಿಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಯು.ಟಿ.ಖಾದರ್ ಸಲಹೆ ನೀಡಿದರು.

ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಮಾತನಾಡಿ, ಕ್ವಾರಂಟೈನ್‌ಗೆ ಒಳಪಡಿಸುವಾಗ ಪ್ರತಿಯೊಬ್ಬರಿಗೂ ಪ್ರತ್ಯೇಕ ಶೌಚಗೃಹ ಇರುವುದು ಅಗತ್ಯ. ಶೌಚಗೃಹ ಬಳಕೆ ಸಂದರ್ಭ ಸೋಂಕು ಹರಡುವ ಸಾಧ್ಯತೆ ಇದೆ ಎಂದರು. ವಸತಿ ವ್ಯವಸ್ಥೆ ಬಗ್ಗೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಕೇರಳದಿಂದ ಮಾಹಿತಿ ನೀರೀಕ್ಷೆ: ದ.ಕ.ಜಿಲ್ಲೆಯಲ್ಲಿ ಕರೊನಾ ಸೋಂಕು ಹರಡಿದ ಮೂಲ ಪತ್ತೆ ಸಂಬಂಧ ತಜ್ಞರ ತಂಡ ಮಧ್ಯಂತರ ವರದಿ ನೀಡಿದೆ. ಆದರೆ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಸೋಂಕು ಪತ್ತೆ ಸಂದರ್ಭ ಕೇರಳದ ರೋಗಿಗಳು ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದರು. ಈ ಬಗ್ಗೆ ಮಾಹಿತಿ ಅಗತ್ಯ ಇರುವ ಕಾರಣ ಅಂತಿಮ ವರದಿಗೆ ತಂಡ ಕಾಲಾವಕಾಶ ಕೋರಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಮೂಲಕ ಕೇರಳ ಸರ್ಕಾರಕ್ಕೆ ಪತ್ರ ಬರೆದು ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ರೋಗಿಗಳ ಆರೋಗ್ಯ ಮಾಹಿತಿ ಕೋರಲಾಗುವುದು. ಈ ಪೈಕಿ ಯಾರಿಗಾದರೂ ಕರೊನಾ ಪಾಸಿಟಿವ್ ಬಂದಿದೆಯಾ ಎಂದು ಪರಿಶೀಲಿಸಬೇಕಾಗಿದೆ ಎಂದರು. ದ.ಕ.ಜಿಲ್ಲಾ ಆರೋಗ್ಯಾಧಿಕಾರಿ ರಾಮಚಂದ್ರ ಬಾಯರಿ ಮಾತನಾಡಿ, ಮೈಕ್ರೋಬಯಾಲಜಿಸ್ಟ್ ಡಾ.ಆನಂದ್ ಅವರನ್ನೊಳಗೊಂಡ 6 ಮಂದಿ ತಜ್ಞರ ತಂಡ ಬಗ್ಗೆ ಪರಿಶೀಲನೆ ನಡೆಸುತ್ತಿದೆ ಎಂದರು.