ಕಾಸರಗೋಡು: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗದಿಂದ ನೇಮಕಗೊಂಡ ಮತದಾರರ ಪಟ್ಟಿ ವೀಕ್ಷಕ ಎಸ್.ಹರಿಕಿಶೋರ್ ಅವರು ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಮಿನಿ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆದ ಮತದಾರರ ಪಟ್ಟಿ ಪರಿಷ್ಕರಣೆ ಸಭೆಯಲ್ಲಿ ವಿಶೇಷ ಸಂಕ್ಷಿಪ್ತ ಮತದಾರರ ಪಟ್ಟಿ ನವೀಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿನ ಚಟುವಟಿಕೆಗಳನ್ನು ಪರಿಶೀಲಿಸಿದರು.
ನವೆಂಬರ್ 28ರವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಬಹುದು. ಡಿಸೆಂಬರ್ 24ರವರೆಗೆ ದೂರುಗಳು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದು. ಮತದಾರರ ಅಂತಿಮ ಪಟ್ಟಿಯನ್ನು ಜನವರಿ 6 ರಂದು ಪ್ರಕಟಿಸಲಾಗುವುದು.
ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ 2,919 ನಮೂನೆಗಳು ಬಂದಿವೆ ಎಂದು ಜಿಲ್ಲಾಧಿಕಾರಿ ಕೆ. ಇನ್ಭಾಶೇಖರ್ ಹೇಳಿದರು. ಅಲ್ಲದೆ ಪ್ರತಿ ವಾರ ಬಂದಿರುವ ದೂರುಗಳ ಅಂಕಿಅಂಶಗಳನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಒದಗಿಸಿ ಪರಿಹರಿಸಬೇಕು ಎಂದರು. ಉಪಜಿಲ್ಲಾಧಿಕಾರಿ ಪ್ರತೀಕ್ ಜೈನ್ ಹಾಗೂ ಅಪರ ಜಿಲ್ಲಾಧಿಕಾರಿಗಳಾದ ಕೆ. ರಾಜನ್ ಮೊದಲಾದವರು ಭಾಗವಹಿಸಿದ್ದರು.