ಜಿಲ್ಲೆ

ಹರ್ಷನ ಮನೆಗೆ ಭೇಟಿ ನೀಡಿ ಸರ್ಕಾರದ ವತಿಯಿಂದ ನೀಡಿದ 25 ಲಕ್ಷ ರೂ. ಪರಿಹಾರ ಚೆಕ್​ ವಿತರಿಸಿದ ಬಿಎಸ್​ವೈ

ಬೆಂಗಳೂರು/ಶಿವಮೊಗ್ಗ: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಅವರ ಮನೆಗೆ ಇಂದು (ಮಾ.6) ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ರಾಜ್ಯ ಸರ್ಕಾರದ ವತಿಯಿಂದ ನೀಡಲಾದ 25 ಲಕ್ಷ ರೂಪಾಯಿ ಮೊತ್ತದ ಚೆಕ್ ಅನ್ನು ಕುಟುಂಬಕ್ಕೆ ಹಸ್ತಾಂತರಿಸಿದರು.

ಚೆಕ್​ ಹಸ್ತಾಂತರ ಮಾಡುವುದಕ್ಕೂ ಮುನ್ನ ಹರ್ಷ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಕೆ. ಎಸ್. ಈಶ್ವರಪ್ಪ, ಸಂಸದರಾದ ಶ್ರೀ ಬಿ. ವೈ. ರಾಘವೇಂದ್ರ ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಫೆಬ್ರವರಿ 20ರ ರಾತ್ರಿ ಹರ್ಷನನ್ನು ಭೀಕರವಾಗಿ ಕೊಲೆ ಮಾಡಿದ ದುಷ್ಕರ್ಮಿಗಳು ಬಳಿಕ ಕಾರಿನಲ್ಲಿ ಎಸ್ಕೇಪ್​ ಆಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಎರಡನೇ ಜೆಎಂಎಫ್​ಸಿ ನ್ಯಾಯಾಧೀಶರಾದ ಶ್ರೀಮತಿ ಸಮ್ಮತಿರವರು, ಮಾರ್ಚ್ 7ರ ತನಕ ಆರೋಪಿಗಳನ್ನು ಪೊಲೀಸರ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ. ಕೊಲೆ ಪ್ರಕರಣದಲ್ಲಿ 10 ಆರೋಪಿಗಳನ್ನು ಇನ್ನೂ ಹೆಚ್ಚಿನ ವಿಚಾರಣೆ ನಡೆಸಬೇಕಾಗಿದೆ. ಹೀಗಾಗಿ 15 ದಿನಗಳ ಕಾಲ ತಮ್ಮ ವಶಕ್ಕೆ ನೀಡಬೇಕು ಎಂದು ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಮಾರ್ಚ್​ 7ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.