ಜಿಲ್ಲೆ

ಬಾಲ್ಯವಿವಾಹ ಕಂಡುಬಂದರೆ ಕಠಿಣ ಕ್ರಮ: ನ್ಯಾಯಾಧೀಶ ಮಾರುತಿ ಬಾಗಡೆ

ರಾಯಚೂರು: ಬಾಲ್ಯ ವಿವಾಹವು ಸಮಾಜಕ್ಕೆ ಮಾರಕವಾದ ಸಮಸ್ಯೆಯಾಗಿದ್ದು, ಈ ಕುರಿತು ಸ್ಥಳೀಯ ಮಟ್ಟದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಮೂಲಕ ಬಾಲ್ಯ ವಿವಾಹವನ್ನು ತಡೆಗಟ್ಟಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮಾರುತಿ ಬಾಗಡೆ ಹೇಳಿದರು.

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಅಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಬಾಲನ್ಯಾಯ ಕಾಯ್ದೆ-2015, ಬಾಲ್ಯವಿವಾಹ ನಿಷೇಧ ಕಾಯ್ದೆ-2008, ಪೋಕ್ಸೋ ಕಾಯ್ದೆ-2012 ಹಾಗೂ ದತ್ತು ಅಧಿನಿಯಮದ ಕುರಿತು ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಶುಕ್ರವಾರ ಮಾತನಾಡಿದರು.

ಬಾಲ್ಯ ವಿವಾಹವು ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದ್ದು, ಕಾಯ್ದೆಯ ಪ್ರಕಾರ ಬಾಲ್ಯ ವಿವಾಹ ಆದಲ್ಲಿ ವಿವಾಹಕ್ಕೊಳಗಾದ ಬಾಲಕ, ಬಾಲಕಿಯ ತಂದೆ, ತಾಯಿ ಸೇರಿದಂತೆ ಸಂಬಂಧಟ್ಟ ಎಲ್ಲರ ವಿರುದ್ಧ ಕಾನೂನಿನ ಅಡಿಯಲ್ಲಿ ಶಿಕ್ಷೆ ನೀಡಲಾಗುವುದು ಎಂದರು.

ಪೋಕ್ಸೋ ಕಾಯ್ದೆಯಡಿ ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿಗಳಿದ್ದು, ಎಲ್ಲರೂ ಸೇರಿ ಪೋಕ್ಸೋ ಕಾಯ್ದೆಯ ಕುರಿತು ಜನರಿಗೆ ಅರಿವು ಮೂಡಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಹೇಳಿದರು.

ಇದೇ ವೇಳೆ ಡಿಸಿ ಕೆ.ನಿತೀಶ ಮಾತನಾಡಿ, ಜಿಲ್ಲೆಯಲ್ಲಿ ಬಾಲ್ಯವಿವಾಹ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಎಲ್ಲರೂ ಕೈಜೋಡಿಸಬೇಕು. ಮಕ್ಕಳನ್ನು ಬಾಲಕಾರ್ಮಿಕ ಪದ್ಧತಿಯಿಂದ ಹೊರ ತರವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ, ಜಿ.ಪಂ ಸಿಇಒ ರಾಹುಲ್ ತುಕಾರಂ ಪಾಂಡ್ವೆ, ಎಸ್ಪಿ ಎಂ.ಪುಟ್ಟಮಾದಯ್ಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಎ.ಸಾತ್ವಿಕ್, ಎಎಸ್ಪಿ ಡಾ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಡಿಡಿ ನವೀನ ಕುಮಾರ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಮಂಗಳ ಹೆಗಡೆ, ಪೊಲೀಸ್ ತರಬೇತಿದಾರ ಸಿ.ಜೆ.ರೋಹಿತ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅಮರೇಶ ಸೇರಿದಂತೆ ಇತರರಿದ್ದರು.