ರಾಯಚೂರು: ಸಂವಿಧಾನ ದಿನಾಚರಣೆ ನಿಮಿತ್ತ ಸಂವಿಧಾನ ತಿಳಿಯಿರಿ ಹೆಸರಿನಲ್ಲಿ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಥಳೀಯ ಎಸ್‌ಎಸ್‌ಎಂ ಪದವಿ ಕಾಲೇಜಿನಲ್ಲಿ ಶನಿವಾರ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ಬಿಸಾತಿ ಭರತ್ ತಿಳಿಸಿದರು.
ಸ್ಥಳೀಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಏರ್ಪಡಿಸಿದ್ದ ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಈ ಪೈಕಿ 150 ಜನ ವಿದ್ಯಾರ್ಥಿನಿಯರಾಗಿದ್ದಾರೆ. ರಸಪ್ರಶ್ನೆ ಸ್ಪರ್ಧೆಯಲ್ಲಿ 12 ವಿದ್ಯಾರ್ಥಿಗಳು ಮತ್ತು ಕನ್ನಡ ಹಾಗೂ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ತಲಾ 6 ವಿದ್ಯಾರ್ಥಿಗಳು ಪ್ರಶಸ್ತಿಗೆ ಭಾಜನರಾಗಿದ್ದರೆ. ಆಯ್ಕೆಯಾಗಿರುವ ವಿದ್ಯಾರ್ಥಿಗಳನ್ನು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಕಳುಹಿಸಲಾಗುವುದು ಎಂದರು.
ಯುವಜನರಲ್ಲಿ ಸಾಂವಿಧಾನಿಕ ಮೌಲ್ಯಗಳು ಮತ್ತು ಪ್ರಜಾಸತ್ತಾತ್ಮಕ ಮನೋಭಾವ ಮೂಡಿಸಲು ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಸಂವಿಧಾನದ ಮುನ್ನುಡಿ, ಹಕ್ಕುಗಳು, ಸಾಮಾಜಿಕ ನ್ಯಾಯ, ಆಡಳಿತ ವಿಕೇಂದ್ರಿಕರಣ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಲಾಗಿದೆ ಎಂದು ಬಿಸಾತಿ ಭರತ್ ಹೇಳಿದರು. ಎನ್‌ಎಸ್‌ಎಸ್ ಯೋಜನಾಧಿಕಾರಿ ಡಾ.ಶ್ರೀನಿವಾಸ ರಾಯಚೂರಕರ್, ಎನ್‌ಸಿಸಿ ಯೋಜನಾಧಿಕಾರಿ ರವಿಕುಮಾರ, ಉಪನ್ಯಾಸಕರಾದ ಎ.ಎಂ.ಮಲ್ಲಿಕಾರ್ಜುನ, ಆಶಪ್ಪ ಉಪಸ್ಥಿತರಿದ್ದರು.