ಜಿಲ್ಲೆ

ಸ್ವಚ್ಛ ಪರಿಸರದಿಂದ ಸಮೃದ್ಧ ಆರೋಗ್ಯ: ನ್ಯಾಯಾಧೀಶ ಮಾರುತಿ ಬಾಗಡೆ ಅಭಿಪ್ರಾಯ

ರಾಯಚೂರು: ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಮಾರುತಿ ಬಾಗಡೆ ಹೇಳಿದರು.

ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.

ಪರಿಸರ ಸ್ವಚ್ಛವಾಗಿದ್ದರೆ ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ. ಪರಿಸರವನ್ನು ಸ್ವಚ್ಛವಾಗಿಡುವಲ್ಲಿ ಆಸ್ಪತ್ರೆಯ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರ ಕಾರ್ಯ ಶ್ಲಾಘನೀಯವಾದದ್ದು ಎಂದರು.
ಪ್ರಕೃತಿಯ ಮಹತ್ವದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಅ.2ರಂದು ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಈ ಸಂದರ್ಭದಲ್ಲಿ ಪ್ರಧಾನ ಕೌಟುಂಬಿಕ ನ್ಯಾಯಾಧೀಶ ಎಸ್.ವಿ ಶ್ರೀಕಾಂತ್, ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹತ್ತಿಕಾಳ್ ಪ್ರಭು ಸಿದ್ದಪ್ಪ, ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೆಚ್.ಎ.ಸಾತ್ವಿಕ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸೇರಿದಂತೆ ಇತರರಿದ್ದರು.