ರಾಯಚೂರಿನ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಯಿತು.  
ಜಿಲ್ಲೆ

ಕೃಷಿಕರ ಸಭೆ ಆಯೋಜಿಸಲು ಒತ್ತಾಯಿಸಿ ರಾಜ್ಯ ರೈತ ಸಂಘದ ಮನವಿ

ರಾಯಚೂರು: ಕೃಷಿಕರ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ರೈತರ ಸಭೆಯನ್ನು ಕರೆದು ಚರ್ಚಿಸಬೇಕು ಎಂದು ಒತ್ತಾಯಿಸಿ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಶುಕ್ರವಾರ ಪ್ರತಿಭಟನೆ ನಡೆಸಿ, ಡಿಸಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಿದಂತೆ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ ಮತ್ತು ಉಪ ಕಾಲುವೆಗಳಲ್ಲಿ ಅನಧಿಕೃತವಾಗಿ ನೀರು ಕಬಳಿಸುತ್ತಿರುವುದನ್ನು ತಡೆಯಬೇಕೆಂದು ಸಚಿವರು ಆದೇಶಿಸಿದ್ದರೂ ಇದುವರೆಗೂ ಯಾವುದೇ ಕ್ರಮ ಜರುಗಿಸಿಲ್ಲ. ಜಿಲ್ಲೆಯಲ್ಲಿ ವಿದ್ಯುತ್ ವಿತರಣೆಯಲ್ಲಿ ಲೋಪ ದೋಷಗಳು ಆಗುತ್ತಿದ್ದು, ಸರ್ಕಾರ ನಿಗದಿಪಡಿಸಿದಂತೆ 7 ಗಂಟೆ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಗೊಬ್ಬರ ಮತ್ತು ಕ್ರಿಮಿನಾಶಕ ಅಂಗಡಿಗಳಲ್ಲಿ ಎಂಆರ್‌ಪಿ ದರ ನಮೂದಿಸಬೇಕು. ಕೃಷಿ ಪರಿಕರಗಳನ್ನು ರಿಯಾಯತಿ ದರದಲ್ಲಿ ನೀಡುವ ಬಗ್ಗೆ ಕೃಷಿ ಕಚೇರಿ ಮುಂದೆ ನೊಟೀಸ್ ಅಳವಡಿಸಬೇಕು ಎಂದು ಸಂಘ ಒತ್ತಾಯಿಸಿತು.

ಟ್ರ್ಯಾಕ್ಟರ್ ಮತ್ತು ಕಟಾವು ಯಂತ್ರಗಳ ಎಂಆರ್‌ಪಿ ದರಪಟ್ಟಿಯನ್ನು ಷೋರೂಮ್‌ಗಳಲ್ಲಿ ನಮೂದಿಸಬೇಕು. ಕಳೆದ ವರ್ಷ ಮತ್ತು ಈ ವರ್ಷದಲ್ಲಿ ಅತಿವೃಷ್ಟಿಯಿಂದ ಹಾನಿಯಾದ ಬೆಳಗಳಿಗೆ ಪರಿಹಾರ ನೀಡಬೇಕು. ಸರ್ವೇ ಇಲಾಖೆಯಲ್ಲಿ ಭೂಮಿ ವರ್ಗಾವಣೆಗೆ ಆಗುತ್ತಿರುವ ವಿಳಂಬ ತಡೆಯಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.