ರಾಯಚೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಅಧ್ಯಕ್ಷತೆಯಲ್ಲಿ ಗುರುವಾರ ಮಳೆ ಹಾನಿ ಮತ್ತು ಪ್ರವಾಹ ಸ್ಥಿತಿಗತಿ ಬಗ್ಗೆ ಸಭೆ ಜರುಗಿತು. 
ಜಿಲ್ಲೆ

ಪ್ರವಾಹ ಪರಿಸ್ಥಿತಿ ಎದುರಿಸಲು ಸಿದ್ಧರಾಗಲು ಅಧಿಕಾರಿಗಳಿಗೆ ಸಚಿವ ಶಂಕರ ಪಾಟೀಲ್ ಸೂಚನೆ

ರಾಯಚೂರು: ಜಲಾಶಯದ ಮೇಲ್ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಜಲಾಶಯಗಳಿಂದ ಕೃಷ್ಣಾ ಮತ್ತು ತುಂಗಭದ್ರಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿಸಲಾಗುತ್ತಿದೆ. ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಂಡು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಮಳೆ ಹಾನಿ ಮತ್ತು ಪ್ರವಾಹ ಪರಿಸ್ಥಿತಿ ಕುರಿತು ಅಧಿಕಾರಿಗಳ ಸಭೆ ನಡೆಸಿ, ನಿರ್ಲಕ್ಷೃ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುತ್ತಿದ್ದು, ಯಾರಿಗೂ ರಜೆ ನೀಡದಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ಪ್ರವಾಹ ಪೀಡಿತ ಗುರ್ಜಾಪುರ ಗ್ರಾಮ ಸ್ಥಳಾಂತರಕ್ಕೆ ಸೂಕ್ತ ಕ್ರಮಕೈಗೊಳ್ಳಬೇಕು. ಮಳೆ ಹಾನಿ ಬಗ್ಗೆ ಪರಿಶೀಲನೆ ನಡೆಸಬೇಕು. ಲಿಂಗಸುಗೂರು ತಾಲೂಕಿನಲ್ಲಿನ ನಡುಗಡ್ಡೆಗಳ ಗ್ರಾಮಸ್ಥರಿಗೆ ಅಗತ್ಯ ಸೌಕರ್ಯ ಕಲ್ಪಿಸಬೇಕು ಎಂದು ತಿಳಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಆರ್.ದೇವಿಕಾ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ಶೇ.66ರಷ್ಟು ಪ್ರದೇಶದಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಜುಲೈನಲ್ಲಿ ಸುರಿದ ಮಳೆಗೆ ಬಿತ್ತನೆ ಮಾಡಿದ ರೈತರಿಗೆ ನಂತರ ಮಳೆ ಬಾರದ ಕಾರಣ ಸಮಸ್ಯೆಯಾಗಿತ್ತು. ಈಗ ಮಳೆ ಬಂದಿರುವುದರಿಂದ ಅನುಕೂಲವಾಗಿದೆ ಎಂದರು.

ರಸಗೊಬ್ಬರ ಕೊರತೆಯಾದಂತೆ ನೋಡಿಕೊಳ್ಳಲಾಗುತ್ತಿದ್ದು, ಹೆಚ್ಚಿನ ಬೇಡಿಕೆಯಿರುವುದರಿಂದ ಯೂರಿಯಾ ಕೊರತೆಯಾಗುತ್ತಿದೆ ಎಂದಾಗ, ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಜಿಲ್ಲೆಗೆ ಆಗಸ್ಟ್‌ನಲ್ಲಿ ಹಂಚಿಕೆಯಾಗಿರುವ ರಸಗೊಬ್ಬರವನ್ನು ಪ್ರಸಕ್ತ ತಿಂಗಳಲ್ಲಿ ಕಳಿಸುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಮಾತನಾಡಿ, ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರದ ಕೊರತೆಯಾಗದಂತೆ ಕ್ರಮಕೈಗೊಳ್ಳಬೇಕು. ಸಂಸದರ ಗಮನಕ್ಕೆ ತಂದು ಅಗತ್ಯವಿರುವ ರಸಗೊಬ್ಬರ ಪೂರೈಕೆಗೆ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.

ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕ ಡಾ.ಶಿವರಾಜ ಪಾಟೀಲ್, ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ, ಜಿಪಂ ಸಿಇಒ ನೂರ್ ಜಹರಾ ಖಾನಂ, ಎಸ್ಪಿ ಬಿ.ನಿಖಿಲ್, ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರಗೇಶ ಮತ್ತು ವಿವಿಧ ಇಲಾಖೆ ಅಧಿಕಾರಿಗಳಿದ್ದರು.

ಯಾವುದೇ ಕಾರಣಕ್ಕೂ ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡದೆ ನೀರು ಪೂರೈಕೆ ಮಾಡಬಾರದು. ಅಗತ್ಯ ಕಾಮಗಾರಿ ಕೈಗೊಳ್ಳಲು ಪ್ರಸ್ತುತ 10 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಕಲುಷಿತ ನೀರು ಪೂರೈಕೆಯ ತಪ್ಪು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ಸಮಸ್ಯೆಯಿದ್ದಲ್ಲಿ ಶಾಸಕ, ಜಿಲ್ಲಾಧಿಕಾರಿ ಗಮನಕ್ಕೆ ತರಬೇಕು.| ಶಂಕರ ಪಾಟೀಲ್ ಮುನೇನಕೊಪ್ಪ

ನಗರದಲ್ಲಿನ 36 ಕುಡಿಯುವ ನೀರು ಸರಬರಾಜು ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸಲಾಗಿದ್ದು, 6 ದೊಡ್ಡ ಪೈಪ್ ಮತ್ತು 170 ಚಿಕ್ಕ ಪೈಪ್‌ಗಳಲ್ಲಿನ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ದುರಸ್ತಿ ಕಾರ್ಯ ನಡೆಸಿ ಕಲುಷಿತ ನೀರು ಪೂರೈಕೆಯಾಗದಂತೆ ಕ್ರಮಕೈಗೊಳ್ಳಲಾಗಿದೆ.
| ಡಾ.ಕೆ.ಗುರುಲಿಂಗಪ್ಪ, ನಗರಸಭೆ ಪೌರಾಯುಕ್ತ